ದೇಶದಲ್ಲಿ ಹೆಚ್ಚುತ್ತಿರುವ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಯಲು ಕೇಂದ್ರ ಸರ್ಕಾರವು 'ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ, 2024'ಕ್ಕೆ ಕಠಿಣ ತಿದ್ದುಪಡಿ ತರಲು ಮುಂದಾಗಿದೆ.

ನವದೆಹಲಿ (ಜು.24): ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿರುವ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅತ್ಯಂತ ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದೆ. ಪರೀಕ್ಷಾ ಅಕ್ರಮವೆಸಗುವ ಜಾಲಗಳಿಗೆ ಗರಿಷ್ಠ ₹10 ಕೋಟಿ ರೂಪಾಯಿ ದಂಡ ಹಾಗೂ 10 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಮತ್ತು 3 ತಿಂಗಳೊಳಗೆ ತನಿಖೆ ಹಾಗೂ ವಿಚಾರಣೆ ಪೂರ್ಣಗೊಳಿಸುವ ಕಠಿಣ ತಿದ್ದುಪಡಿ ವಿಧೇಯಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೇಂದ್ರ ಸಂಪುಟ ಸಭೆಯು ಅನುಮೋದನೆ ನೀಡಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂಬರುವ ಸೋಮವಾರ ಸಂಸತ್ತಿನಲ್ಲಿ ಈ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆಯುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮೂರೇ ತಿಂಗಳಲ್ಲಿ ವಿಚಾರಣೆ ಪೂರ್ಣ; ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ

ಸಂಘಟಿತ ಪ್ರಶ್ನೆಪತ್ರಿಕೆ ಸೋರಿಕೆ ಸಿಂಡಿಕೇಟ್‌ಗಳ ಜಾಲವನ್ನು ಸಂಪೂರ್ಣವಾಗಿ ಧ್ವಂಸಗೊಳಿಸುವ ಉದ್ದೇಶದಿಂದ ಹಾಲಿ ಇರುವ 'ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ, 2024'ಕ್ಕೆ (Public Examinations Act, 2024) ಪ್ರಮುಖ ತಿದ್ದುಪಡಿಗಳನ್ನು ತರಲಾಗುತ್ತಿದೆ. ಹೊಸ ತಿದ್ದುಪಡಿಗಳ ಪ್ರಕಾರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತನಿಖೆ ಮತ್ತು ನ್ಯಾಯಾಲಯದ ವಿಚಾರಣೆಯನ್ನು ಮೂರೇ ತಿಂಗಳಲ್ಲಿ (3 months) ಪೂರ್ಣಗೊಳಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ವಿಶೇಷ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು (ವಿಶೇಷ ತ್ವರಿತ ನ್ಯಾಯಾಲಯ) ಸ್ಥಾಪಿಸಲು ಕಾನೂನುಬದ್ಧ ಬೆಂಬಲ ನೀಡಲಾಗಿದೆ.

₹10 ಕೋಟಿ ದಂಡ, 10 ವರ್ಷ ಜೈಲು

ಸಂಘಟಿತ ಪರೀಕ್ಷಾ ಅಕ್ರಮ ಜಾಲಗಳಲ್ಲಿ ಭಾಗಿಯಾಗುವ ತಪ್ಪಿತಸ್ಥರಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹10 ಕೋಟಿ ರೂಪಾಯಿವರೆಗೆ ಭಾರಿ ದಂಡ ವಿಧಿಸುವ ಕಠಿಣ ಶಿಕ್ಷೆಯ ಪ್ರಸ್ತಾಪವನ್ನು ನೂತನ ತಿದ್ದುಪಡಿಯಲ್ಲಿ ಸೇರಿಸಲಾಗಿದೆ.

ಹಾಲಿ ಕಾಯ್ದೆಯಲ್ಲಿ ಏನಿದೆ?

2024ರ ಜೂನ್‌ನಲ್ಲಿ ಜಾರಿಗೆ ಬಂದಿದ್ದ ಹಾಲಿ ಕಾಯ್ದೆಯು ನೀಟ್ (NEET), ಜೆಇಇ (JEE) ಸೇರಿದಂತೆ ಸಾರ್ವಜನಿಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಸಂಘಟಿತ ಕಾಪಿ, ಇಂಪರ್ಸನೇಷನ್ ಮತ್ತು ಕಂಪ್ಯೂಟರ್ ಸಿಸ್ಟಮ್ ಟ್ಯಾಂಪರಿಂಗ್‌ಗಳನ್ನು ಅಪರಾಧ ಎಂದು ಪರಿಗಣಿಸುತ್ತದೆ. ಪ್ರಸ್ತುತ ಕಾಯ್ದೆಯಡಿ ಅಪರಾಧಿಗಳಿಗೆ 3 ರಿಂದ 5 ವರ್ಷಗಳ ಜೈಲು ಶಿಕ್ಷೆ ಹಾಗೂ ₹10 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ಸಂಘಟಿತ ರ‍್ಯಾಕೆಟ್ ನಡೆಸುವವರಿಗೆ 5 ರಿಂದ 10 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ ₹1 ಕೋಟಿ ದಂಡ ವಿಧಿಸಲಾಗುತ್ತಿತ್ತು. ಈಗ ಇದನ್ನು ಮತ್ತಷ್ಟು ಕಠಿಣಗೊಳಿಸಿ ದಂಡದ ಪ್ರಮಾಣವನ್ನು ₹10 ಕೋಟಿಗೆ ಏರಿಸಲಾಗಿದೆ.

ಮಧ್ಯರಾತ್ರಿ ಪ್ರಧಾನಿ ಮೋದಿ ಘೋಷಣೆ

ಗುರುವಾರ ಮಧ್ಯರಾತ್ರಿ ವಿಡಿಯೋ ಸಂದೇಶವೊಂದನ್ನು ಬಿಡುಗಡೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, "ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಪ್ರಸ್ತಾಪವುಳ್ಳ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲಾಗುವುದು" ಎಂದು ಭರವಸೆ ನೀಡಿದ್ದರು. ಅದರ ಬೆನ್ನಲ್ಲೇ ಕೇಂದ್ರ ಸಂಪುಟವು ಈ ಕರಡು ವಿಧೇಯಕಕ್ಕೆ ಅಂಕಿತ ಹಾಕಿದೆ.

ಮೇ ತಿಂಗಳಿನಲ್ಲಿ ನಡೆದಿದ್ದ ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಅಕ್ರಮದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗೆ ಆಗ್ರಹಿಸಿ ಹೋರಾಟ ತೀವ್ರಗೊಂಡಿರುವ ಬೆನ್ನಲ್ಲೇ ಸರ್ಕಾರ ಈ ಕಠಿಣ ನಿರ್ಧಾರ ತಳೆದಿದೆ.