ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಮುಂದೆ ಇಡಿ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರಕ್ಕೆ ನೀಡಿದ ಸೂಚನೆ ಏನು?
ಕೊಚ್ಚಿ (ಜೂ.4): ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಪಿಣರಾಯಿ ವಿಜಯನ್(Pinarayi vijayan) ಅವರ ಮನೆ ಮುಂದೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ED ಅಧಿಕಾರಿಗಳಿಗೆ ಸರಿಯಾದ ಭದ್ರತೆ ಒದಗಿಸುವಲ್ಲಿ ಸ್ಥಳೀಯ ಪೊಲೀಸರು ವಿಫಲರಾಗಿದ್ದಾರೆ. ಹೀಗಾಗಿ, ಇದೇ ಪೊಲೀಸರು ತನಿಖೆ ನಡೆಸುವುದರಿಂದ ಆರೋಪಿಗಳಿಗೆ ಅನುಕೂಲವಾಗಲಿದೆ ಪ್ರಕರಣದ ಆರೋಪಿಗಳು ಸಿಕ್ಕಿಬಿಳುವುದಿಲ್ಲ, ಪ್ರಕರಣದ ಸತ್ಯಾಂಶ ಹೊರಬರುವುದಿಲ್ಲ. ಹೀಗಾಗಿ ಸಿಬಿಐಗೆ ವಹಿಸಬೇಕು ಎಂದು ಅರ್ಜಿದಾರರ ದೂರಿನಲ್ಲಿ ತಿಳಿಸಿದ್ದಾರೆ.
ಹೈಕೋರ್ಟ್ ಹೇಳಿದ್ದೇನು?
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಯ ಪ್ರಗತಿ ವರದಿ ನೀಡುವಂತೆ ಕೇರಳ ಸರ್ಕಾರಕ್ಕೆ ಸೂಚಿಸಿದೆ. ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಇಲ್ಲಿಯವರೆಗೆ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ತಿಳಿಸುವಂತೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿಗಳ ಪೀಠವು, ಮೂರು ವಾರಗಳೊಳಗೆ ವರದಿ ಸಲ್ಲಿಸಬೇಕೆಂದು ಗಡುವು ನೀಡಿದೆ.
ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಏನೆಂಬುದನ್ನು ಕೇಳಿ ತಿಳಿಸುವುದಾಗಿ ಕೇಂದ್ರ ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.


