ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಕಸ್ತೂರಿ ರಂಗನ್ ವರದಿಯನ್ನು ಸದ್ಯಕ್ಕೆ ಅನುಷ್ಠಾನಕ್ಕೆ ತರುವುದಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನವದೆಹಲಿ (ಜು.26): ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಕಸ್ತೂರಿ ರಂಗನ್ ವರದಿಯನ್ನು ಸದ್ಯಕ್ಕೆ ಅನುಷ್ಠಾನಕ್ಕೆ ತರುವುದಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹೀಗಾಗಿ ಭೂಮಿ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದ ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳ ನಿವಾಸಿಗಳು ನಿಟ್ಟುಸಿರು ಬಿಡುವಂತಾಗಿದೆ. ರಾಜಧಾನಿ ನವದೆಹಲಿಯಲ್ಲಿ ಸೋಮವಾರ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯದ ನಿಯೋಗ ಭೇಟಿ ಮಾಡಿ ಕಸ್ತೂರಿ ರಂಗನ್ ವರದಿಯ ಬಗ್ಗೆ ಚರ್ಚಿಸಿತು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಕಸ್ತೂರಿ ರಂಗನ್ ವರದಿ ಬಗ್ಗೆ ವಿವಿಧ ರಾಜ್ಯಗಳು ನೀಡಿರುವ ಸ್ಪಷ್ಟನೆಗಳ ಆಧಾರದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿವೃತ್ತ ಐಎಫ್‌ಎಸ್ ಅಧಿಕಾರಿ ಸಂಜಯ್ ಕುಮಾರ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದು ಅಧ್ಯಯನಕ್ಕೆ ಒಂದು ವರ್ಷದ ಅವಧಿಯನ್ನೂ ನೀಡಿದೆ. ಜನರೊಂದಿಗೆ ಮಾತನಾಡಿ, ಅಲ್ಲಿ ಜನ ಬೆಳೆದಿರುವ ಬೆಳೆಗಳು, ಸಾಂಸ್ಕೃತಿಕ ಹಾಗೂ ನೈಸರ್ಗಿಕ ಭೂ ಪ್ರದೇಶದ ಕುರಿತು ಸಂಪೂರ್ಣ ಅಧ್ಯಯನ ಕೈಗೊಂಡು ವರದಿ ನೀಡಬೇಕು. ಅಲ್ಲಿಯವರೆಗೆ ಈ ಅಧಿಸೂಚನೆಯನ್ನು ಅನುಷ್ಠಾನಕ್ಕೆ ತರಲು ಸಾಧ್ಯವಾಗುವುದಿಲ್ಲ ಎನ್ನುವ ವಿಚಾರವನ್ನು ಕೇಂದ್ರ ಸಚಿವರು ತಿಳಿಸಿದ್ದಾರೆ. ಅದರ ಪ್ರತಿಯನ್ನೂ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.
ಕಸ್ತೂರಿ ರಂಗನ್ ವರದಿ ವಿರುದ್ಧ ಕಾನೂನು ಹೋರಾಟ
ಇದೇ ವೇಳೆ ಕೇವಲ ಸ್ಯಾಟಲೈಟ್ ಸಮೀಕ್ಷೆಯ ಆಧಾರದಲ್ಲಿ ಸಿದ್ಧಪಡಿಸಲಾಗಿರುವ ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾಗಿದ್ದು ಈ ಪ್ರದೇಶದ ಭೂಮಿ ಸಮೀಕ್ಷೆ ನಡೆಸದೇ ವಾಸ್ತವಾಂಶ ತಿಳಿಯುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಜೊತೆಗೆ ಭೂಪೇಂದ್ರ ಯಾದವ್ ಅವರಿಗೆ ರಾಜ್ಯಕ್ಕೆ ಭೇಟಿ ನೀಡಿ ಈ ಭಾಗಗಳಲ್ಲಿ ಸುತ್ತಿ ಪರಿಶೀಲಿಸುವಂತೆ ಕೋರಲಾಗಿದ್ದು, ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದೀಗ ಪಶ್ಚಿಮ ಘಟ್ಟಗಳಿರುವ ಎಲ್ಲ ರಾಜ್ಯಗಳಿಗೆ ಅದನ್ನು ಪ್ರತಿಪಾದಿಸಿ, ಉಳಿಸುವ ಮತ್ತೊಂದು ಅವಕಾಶ ದೊರೆತಿದೆ.
ಆರ್.ವಿ. ದೇಶ್‌ಪಾಂಡೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿ ವಿರುದ್ಧ ಹೋರಾಟ
ರಾಜ್ಯಮಟ್ಟದಲ್ಲಿಯೂ ಕೂಡ ಸಮಿತಿಯ ವಿಚಾರಣಾ ಉಲ್ಲೇಖಗಳ ಆಧಾರದ ಮೇಲೆ ಉನ್ನತ ಮಟ್ಟದ ಸಮಿತಿಯನ್ನು ಸಹ ರಚಿಸಲಾಗುವುದು ಎಂದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಸದರಾದ ಪ್ರತಾಪ ಸಿಂಹ, ಬಿ.ವೈ.ರಾಘವೇಂದ್ರ, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಶಾಸಕ ಹಾಲಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್ ನಿಯೋಗದಲ್ಲಿದ್ದರು.
