ಮುಂಬೈ[ಡಿ.27]: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಡಿ.30ರಂದು ತಮ್ಮ ಸಂಪುಟವನ್ನು ವಿಸ್ತರಿಸುವ ಸಾಧ್ಯತೆ ಇದೆ. ಆದರೆ, ಸಂಪುಟ ವಿಸ್ತರಣೆಗೂ ಮುನ್ನವೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ಪ್ರಸ್ತುತ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ತಲಾ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. ಜನರೊಂದಿಗೆ ನೇರ ಸಂಪರ್ಕ ಇಲ್ಲದ ಕಂದಾಯ ಮತ್ತು ಲೋಕೋಪಯೋಗಿ ಇಲಾಖೆಯನ್ನು ನೀಡಿರುವುದಕ್ಕೆ ಕಾಂಗ್ರೆಸ್‌ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ಬಾರಿ ಗೃಹ, ಹಣಕಾಸು, ನಗರಾಭಿವೃದ್ಧಿಯಂತಹ ಮಹತ್ವದ ಖಾತೆಗಳನ್ನು ಪಡೆದುಕೊಳ್ಳುವಂತೆ ರಾಜ್ಯ ಮುಖಂಡರು ಹೈಕಮಾಂಡ್‌ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಈ ಸಂಬಂಧ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಡಿ.28ರಂದು ಚರ್ಚೆ ನಡೆಸಲಾಗುವುದು ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ. ಅಲ್ಲದೇ ಸಹಕಾರ, ಕೈಗಾರಿಕೆ, ವಸತಿ ಮತ್ತು ಗ್ರಾಮೀಣ ಅಭಿವೃದ್ಧಿ ಖಾತೆಗಳ ಮೇಲೂ ಕಾಂಗ್ರೆಸ್‌ ಕಣ್ಣಿಟ್ಟಿದೆ. ಅಧಿಕಾರ ಹಂಚಿಕೆ ಸೂತ್ರದಂತೆ ಶಿವಸೇನೆಗೆ 16, ಎನ್‌ಸಿಪಿ 14 ಮತ್ತು ಕಾಂಗ್ರೆಸ್‌ಗೆ 12 ಖಾತೆಗಳು ಲಭ್ಯವಾಗಲಿವೆ.