ಹೈದರಾಬಾದ್‌(ಮಾ.26): ಕೊರೋನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣ ಸರ್ಕಾರ ಶಾಲಾ- ಕಾಲೇಜುಗಳನ್ನು ಬಂದ್‌ ಮಾಡಿದೆ. ಇದರೊಂದಿಗೆ ಇಂತಹ ನಿರ್ಧಾರ ತೆಗೆದುಕೊಂಡ ದೇಶದ 10ನೇ ರಾಜ್ಯ/ಕೇಂದ್ರಾಡಳಿತ ಪ್ರದೇಶವಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್‌ಗಢ, ಪಂಜಾಬ್‌, ಉತ್ತರಪ್ರದೇಶ, ತಮಿಳುನಾಡು, ಪುದುಚೇರಿ, ಗುಜರಾತ್‌ ಹಾಗೂ ಚಂಡೀಗಢದಲ್ಲಿ ಈಗಾಗಲೇ ಶೈಕ್ಷಣಿಕ ಸಂಸ್ಥೆಗಳನ್ನು ಮುಚ್ಚಲಾಗಿದೆ. ಆಫ್‌ಲೈನ್‌ ತರಗತಿಗಳನ್ನು ನಡೆಸದಂತೆ ಸೂಚಿಸಲಾಗಿದೆ.

ತೆಲಂಗಾಣದಲ್ಲಿ ವೈದ್ಯಕೀಯ ಕಾಲೇಜುಗಳನ್ನು ಹೊರತುಪಡಿಸಿ ಉಳಿದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶೈಕ್ಷಣಿಕ ಸಂಸ್ಥೆಗಳು (ಶಾಲೆ, ಕಾಲೇಜು, ಹಾಸ್ಟೆಲ್‌)ಗಳನ್ನು ಬುಧವಾರದಿಂದಲೇ ಜಾರಿಗೆ ಬರುವಂತೆ ಬಂದ್‌ ಮಾಡಲಾಗಿದೆ. ಕೊರೋನಾ ಕೇಸುಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಅವರು ಪ್ರಕಟಿಸಿದ್ದಾರೆ.

ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣ ಹೆಚ್ಚಾಗುತ್ತಿವೆ. ನಮ್ಮ ನೆರೆಹೊರೆಯ ರಾಜ್ಯಗಳಲ್ಲೂ ಹೆಚ್ಚಿನ ಪ್ರಕರಣ ಕಂಡುಬರುತ್ತಿವೆ. ಹೀಗಾಗಿ ಶೈಕ್ಷಣಿಕ ಸಂಸ್ಥೆಗಳಲ್ಲೂ ಸೋಂಕು ದೃಢಪಡುತ್ತಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಕ್ಷಣ ಹಾಗೂ ಶಿಕ್ಷಣೇತರ ಚಟುವಟಿಕೆಗಳನ್ನು ನಡೆಸುವುದರಿಂದ ಅಪಾಯವಿದೆ ಎಂಬ ಕಾರಣಕ್ಕೆ ಶೈಕ್ಷಣಿಕ ಸಂಸ್ಥೆ ಬಂದ್‌ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಆನ್‌ಲೈನ್‌ ಶಿಕ್ಷಣ ಮುಂದುವರಿಯಲಿದೆ ಎಂದು ವಿವರಿಸಿದ್ದಾರೆ.