abhijit gangopadhyay ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಬಿಜೆಪಿ ಸೇರಿದ್ದಾರೆ

ನವದೆಹಲಿ (ಮಾ.7): ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ ಕೆಲವೇ ದಿನಗಳ ನಂತರ, ಅಭಿಜಿತ್ ಗಂಗೋಪಾಧ್ಯಾಯ ಅವರು ಗುರುವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಮಂಗಳವಾರ ಹೈಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು, ಬಿಜೆಪಿಗೆ ಸೇರುವುದಾಗಿ ಘೋಷಣೆ ಮಾಡಿದ್ದರು. "ಇಂದು, ನಾನು ಹೊಸ ಕ್ಷೇತ್ರವನ್ನು ಆಯ್ದುಕೊಂಡಿದ್ದೇನೆ. ನಾನು ಬಿಜೆಪಿ ಪಕ್ಷಕ್ಕೆ ಸೇರುತ್ತಿರುವುದಕ್ಕೆ ಖುಷಿಯಾಗಿದೆ. ಪಕ್ಷದ ಸೈನಿಕನಾಗಿ ಕೆಲಸ ಮಾಡಲಿದ್ದೇನೆ.. ಭ್ರಷ್ಟ ಟಿಎಂಸಿ ಆಡಳಿತವನ್ನು ರಾಜ್ಯದಿಂದ ಕಿತ್ತೊಗೆಯುವುದು ನಮ್ಮ ಉದ್ದೇಶ" ಎಂದು ಅವರು ಅಧಿಕೃತ ಸೇರ್ಪಡೆಯ ನಂತರ ಹೇಳಿದ್ದಾರೆ. ಸಾಲ್ಟ್ ಲೇಕ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸುಖಾಂತ್‌ ಮಜುಂದಾರ್ ಅವರಿಗೆ ಪಕ್ಷದ ಧ್ವಜವನ್ನು ಹಸ್ತಾಂತರಿಸುತ್ತಿದ್ದಂತೆ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. "ಪಶ್ಚಿಮ ಬಂಗಾಳದ ರಾಜಕೀಯಕ್ಕೆ ಅಭಿಜಿತ್ ಗಂಗೋಪಾಧ್ಯಾಯ ಅವರಂತಹ ವ್ಯಕ್ತಿಯ ಅಗತ್ಯವಿದೆ" ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred