ಗರ್ಲ್ಸ್ ಹಾಸ್ಟೆಲ್ ವಾಶ್‌ರೂಮ್‌ನಲ್ಲಿ ಕ್ಯಾಮರಾ ಇಟ್ಟು ವೀಡಿಯೋ ಲೀಕ್: ಎಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ
ಆಂಧ್ರಪ್ರದೇಶದ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್‌ನ ವಾಶ್‌ರೂಮ್‌ನಲ್ಲಿ ಕಳ್ಳ ಕ್ಯಾಮರಾ ಇಟ್ಟು ವೀಡಿಯೋ ರೆಕಾರ್ಡ್ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ.
ಅಮರಾವತಿ: ಆಂಧ್ರಪ್ರದೇಶದ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್‌ನ ವಾಶ್‌ರೂಮ್‌ನಲ್ಲಿ ಕಳ್ಳ ಕ್ಯಾಮರಾ ಇಟ್ಟು ವೀಡಿಯೋ ರೆಕಾರ್ಡ್ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ರಾತ್ರೋರಾತ್ರಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಆರೋಪಿಯ ಬಂಧನಕ್ಕೆ ಆಗ್ರಹಿಸಿದ್ದಾರೆ. ಇದೇ ಕಾಲೇಜಿನ ವಿದ್ಯಾರ್ಥಿಯೇ ಈ ಕೃತ್ಯವೆಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು, ಆತ ಹೀಗೆ ವಿದ್ಯಾರ್ಥಿನಿಯರ ವಾಶ್ ರೂಮ್ ವೀಡಿಯೋವನ್ನು ಚಿತ್ರೀಕರಿಸಿಕೊಂಡು ಅದನ್ನು ಇತರರಿಗೆ ಮಾರಾಟ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಗುಡ್ಲವಲ್ಲೇರು ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಇದು ಈಗ ರಾಜ್ಯಾದ್ಯಂತ ತೀವ್ರ ಕೋಲಾಹಲ ಎಬ್ಬಿಸಿದೆ. ಘಟನೆ ಖಂಡಿಸಿ ವಿದ್ಯಾರ್ಥಿನಿಯರು ರಾತ್ರೋರಾತ್ರಿ ಹಾಸ್ಟೆಲ್‌ನಿಂದ ಹೊರಬಂದು ಟಾರ್ಚ್ ಲೈಟ್ ಹಿಡಿದು ಪ್ರತಿಭಟನೆ ನಡೆಸುತ್ತಿದ್ದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಈ ಘಟನೆಯಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬನ ಕೈವಾಡ ಇದೆ ಎಂಬ ವದಂತಿ ಹಬ್ಬಿದೆ. ಈ ಹಿನ್ನೆಲೆಯಲ್ಲಿ ಕ್ಯಾಮೆರಾಗಳ ಮೂಲಕ ವಿಡಿಯೋಗಳನ್ನು ಚಿತ್ರೀಕರಿಸಿ ಮಾರಾಟ ಮಾಡುತ್ತಿದ್ದಾನೆ ಎಂಬ ಆರೋಪದ ಮೇಲೆ ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬನ ಮೇಲೆ ಸಹ ವಿದ್ಯಾರ್ಥಿಗಳು ಹಲ್ಲೆ ನಡೆಸಲು ಯತ್ನಿಸಿದ್ದಾರೆ ಈ ವಿಷಯ ತಿಳಿದ ಪೊಲೀಸರು ಘಟನಾ ಸ್ತಳಕ್ಕೆ ಆಗಮಿಸಿದ್ದು, ಕಿರಿಯ ಮತ್ತು ಹಿರಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿಯ ಬಳಿ ಇದ್ದ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಒಂದು ವಾರದ ಹಿಂದೆಯೇ ಈ ವಿಷಯ ಬೆಳಕಿಗೆ ಬಂದಿದ್ದರೂ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೇಡಿಸ್ ಟಾಯ್ಲೆಟ್‌ನಲ್ಲಿ ಕಳ್ಳ ಕ್ಯಾಮರಾ ಇಟ್ಟ ಕಾಮುಕನ ಬಂಧನ
ಇತ್ತ ಸರ್ಕಾರ ಕೂಡ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಈ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಹಾಸ್ಟೆಲ್‌ನಲ್ಲಿ ರಹಸ್ಯ ಕ್ಯಾಮೆರಾಗಳಿವೆ ಎಂಬ ವಿದ್ಯಾರ್ಥಿನಿಯರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸಿಎಂ ಸೂಚಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೊಲ್ಲಾ ರವೀಂದ್ರ, ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸಿಎಂ ಸೂಚಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಶಿಕ್ಷಣ ಸಚಿವ ನಾರಾ ಲೋಕೇಶ್ ಅವರು ಪ್ರತಿಕ್ರಿಯಿಸಿದ್ದು, ಕೃಷ್ಣಾ ಜಿಲ್ಲೆಯ ಗುಡ್ಲವಲ್ಲೇರು ಎಂಜಿನಿಯರಿಂಗ್ ಕಾಲೇಜಿನಲ್ಲಿ ಅರ್ಧರಾತ್ರಿ ವಿದ್ಯಾರ್ಥಿನಿಯರು ನಡೆಸಿದ ಪ್ರತಿಭಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಹಿಡನ್ ಕ್ಯಾಮೆರಾಗಳ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ತನಿಖೆಯಲ್ಲಿ ತಪ್ಪಿತಸ್ಥರು ಮತ್ತು ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ರೀತಿಯ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾಲೇಜುಗಳಲ್ಲಿ ರಾಗಿಂಗ್ ಮತ್ತು ಕಿರುಕುಳ ತಡೆಯಲು ಆಡಳಿತ ಮಂಡಳಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರಿನ ಪ್ರತಿಷ್ಠಿತ ಥರ್ಡ್ ವೇವ್ ಕಾಫಿ ಔಟ್‌ಲೆಟ್‌ನ ಮಹಿಳಾ ವಾಶ್‌ರೂಮ್‌ನಲ್ಲಿ ಕಳ್ಳ ಕ್ಯಾಮರಾ
ಇತ್ತ ಘಟನೆಗೆ ಸಂಬಂಧಿಸಿದಂತೆ ಕೃಷ್ಣ ಜಿಲ್ಲೆಯ ಎಸ್‌ಪಿ ಗಂಗಾಧರ್ ರಾವ್ ಮಾತನಾಡಿದ್ದು, ಗರ್ಲ್ಸ್ ಹಾಸ್ಟೆಲ್‌ನಲ್ಲಿ ತಪಾಸಣೆ ನಡೆಸಿದಾಗ ನಮಗೆ ಯಾವುದೇ ಕ್ಯಾಮರಾಗಳು ಸಿಕ್ಕಿಲ್ಲ, ಅಲ್ಲದೇ ಶಂಕಿತ ವಿದ್ಯಾರ್ಥಿಯ ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಫೋನ್‌ಗಳನ್ನು ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿಯ ಮುಂದೆಯೇ ತಪಾಸಣೆ ಮಾಡಿದ್ದೇವೆ. ಅದರಲ್ಲಿ ಯಾವುದೇ ವೀಡಿಯೋ ಪತ್ತೆಯಾಗಿಲ್ಲ. ಹೀಗಾಗಿ ವಿದ್ಯಾರ್ಥಿನಿಯರು ಚಿಂತಿಸಬೇಕಾದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಆದರೆ ಕೆಲ ಅಂಗ್ಲ ಮಾಧ್ಯಮಗಳ ವರದಿಯ ಪ್ರಕಾರ, 300ಕ್ಕೂ ಅಧಿಕ ಫೋಟೋ ಹಾಗೂ ವೀಡಿಯೋಗಳು ಲೀಕ್ ಆಗಿ ಬಾಯ್ಸ್ ಹಾಸ್ಟೆಲ್‌ನಲ್ಲಿ ಈ ವೀಡಿಯೋಗಳು ಸರ್ಕ್ಯುಲೆಟ್ ಆಗಿದೆ. ಕೆಲ ವಿದ್ಯಾರ್ಥಿಗಳು ಅದನ್ನು ಖರೀದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಕಸ್ಟಡಿಗೆ ಪಡೆದಿದ್ದಾರೆ. ಗುರುವಾರ ಸಂಜೆ ವಿದ್ಯಾರ್ಥಿನಿಯೊಬ್ಬಳು ಕಣ್ಣಿಗೆ ಈ ಹಿಡನ್ ಕ್ಯಾಮರಾ ಕಂಡಿದೆ ಎಂದು ವರದಿ ಆಗಿದೆ.
ಈ ಘಟನೆ ನಿಜವೇ ಆಗಿದ್ದಲ್ಲಿ ಹೆಣ್ಣು ಮಕ್ಕಳಿಗೆ ತಾವೇ ಜಾಗೃತರಾಗದ ಹೊರತು ಯಾವ ಸ್ಥಳವೂ ಕೂಡ ಸುರಕ್ಷಿತವಲ್ಲ ಎಂಬ ಕಹಿ ಸತ್ಯವಂದು ಸಾಬೀತಾಗಿದ್ದು, ಇದರಿಂದ ಪೋಷಕರು ಕಂಗೆಡುವಂತಾಗಿದೆ.