ಬೆಂಗಳೂರು (ಸೆ.17): ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ಬುಧವಾರ ಜಲಶಕ್ತಿ ಸಚಿವ ಗಜೇಂದ್ರಸಿಂಗ್‌ ಶೆಖಾವತ್‌ ಅವರನ್ನು ಭೇಟಿ ಮಾಡಿದ ಅವರು ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಚರ್ಚಿಸಿದರು. ಇದೇ ವೇಳೆ ಕೃಷ್ಣಾ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿಅಣೆಕಟ್ಟು ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಿದರು.

ಮೇಕೆದಾಟು ಡ್ಯಾಂಗೆ ತಮಿಳುನಾಡು ಕ್ಯಾತೆ! .

ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಅವರು, ಭದ್ರಾ ಮೇಲ್ದಂಡೆ ಯೊಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಕೋರಿದರು. ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೈ ಪ್ರಕಾಶ್‌ ಉಪಸ್ಥಿತರಿದ್ದರು.

 ಹಣ ಬಿಡುಗಡೆಗೆ ಮನವಿ

 ನಾರಾಯಣಪುರ ಎಡದಂಡೆ ಕಾಲುವೆ ಜಾಲ ಯೋಜನೆಗೆ 2020-21ನೇ ಸಾಲಿನ ಕೇಂದ್ರ ಸರ್ಕಾರದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಆಗ್ರಹಿಸಿದರು. ದಿಲ್ಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಅವರನ್ನು ಭೇಟಿ ಮಾಡಿದ ಅವರು, ನಾರಾಯಣಪುರ ಎಡದಂಡೆ ಕಾಲುವೆ ಜಾಲದ ಯೋಜನೆ ಕುರಿತು ಚರ್ಚಿಸಿ, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಕೇಂದ್ರದ ನೆರವಿನ ಪಾಲಿನ 218.97 ಕೋಟಿ ರು. ಬಿಡುಗಡೆ ಮಾಡುವಂತೆ ಕೋರಿದರು.