ಕೇರಳದ ಮಲಪ್ಪುರಂ ಜಿಲ್ಲೆಯ ಕುಟ್ಟಿಪ್ಪುರಂ ಬಳಿ ಖಾಸಗಿ ಬಸ್‌ವೊಂದು ನಿಯಂತ್ರಣ ತಪ್ಪಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದು, ಕಾರಿನ ಮೇಲೆ ಮಗುಚಿಬಿದ್ದಿದೆ. ಈ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಲಪ್ಪುರಂ (ಕೇರಳ): ಕೇರಳದ ಮಲಪ್ಪುರಂ ಜಿಲ್ಲೆಯ ಕುಟ್ಟಿಪ್ಪುರಂ ಬಳಿ ತ್ರಿಶೂರ್-ಕೋಝಿಕ್ಕೋಡ್ ಮಾರ್ಗದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ, ಆಟೋರಿಕ್ಷಾಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಮಗುಚಿಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟು, ಸುಮಾರು 20ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೊಳಗಾದ ಬಸ್ ನಿಯಂತ್ರಣ ತಪ್ಪಿದ ರಭಸಕ್ಕೆ ಆಟೋರಿಕ್ಷಾಗೆ ಡಿಕ್ಕಿ ಹೊಡೆದಿದೆ. ಆ ನಂತರ, ಈಗಾಗಲೇ ಮತ್ತೊಂದು ಅಪಘಾತಕ್ಕೆ ಈಡಾಗಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಮಗುಚಿಬಿದ್ದಿದೆ. ಗಾಯಗೊಂಡ ಪ್ರಯಾಣಿಕರ ಪೈಕಿ ಮೂವರ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಅಪಘಾತ ಸಂಭವಿಸಿದ ಸ್ಥಳದಲ್ಲಿದ್ದ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಭೀಕರ ದೃಶ್ಯ ಸೆರೆಯಾಗಿದೆ. ಬಸ್ ನಿಯಂತ್ರಣ ತಪ್ಪಿ ಸುಮಾರು 25 ಮೀಟರ್‌ಗೂ ಹೆಚ್ಚು ದೂರ ರಸ್ತೆಯಲ್ಲಿ ಸ್ಕಿಡ್ ಆಗಿ, ಸರ್ವಿಸ್ ರಸ್ತೆಯ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದು ಮಗುಚಿಬಿದ್ದಿರುವುದು ಸಿಸಿಟಿವಿ ದೃಶ್ಯಾವಳಿಗಳಿಂದ ಕಂಡುಬಂದಿದೆ.

ಭಾಗಗಳನ್ನು ಕತ್ತರಿಸಿ ಪ್ರಯಾಣಿಕರ ರಕ್ಷಣೆ

ಅಪಘಾತ ನಡೆದ ತಕ್ಷಣವೇ ಸ್ಥಳೀಯ ನಿವಾಸಿಗಳು, ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬಸ್ ಮಗುಚಿಬಿದ್ದಿದ್ದರಿಂದ ಒಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತೆಗೆಯಲು ಬಸ್‌ನ ಕೆಲವು ಭಾಗಗಳನ್ನು ಕತ್ತರಿಸಿ ಸಾಹಸಪಟ್ಟು ರಕ್ಷಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಕುಟ್ಟಿಪ್ಪುರಂ, ವಳಂಚೇರಿ ಹಾಗೂ ಕೊಟ್ಟಕ್ಕಲ್‌ನಲ್ಲಿರುವ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

Scroll to load tweet…