ಜಮ್ಮು ಕಾಶ್ಮೀರದ ದೋಡಾದಲ್ಲಿ ಬಸ್ ಕಣಿವೆಗೆ ಉರುಳಿಬಿದ್ದಿದೆ. ಪ್ರಾಥಮಿಕ ವರದಿಗಳ ಪ್ರಕಾರ ಈವರೆಗೂ ಸಾವನ್ನಪ್ಪಿದವರ ಸಂಖ್ಯ 38 ಆಗಿರಬಹುದು ಎನ್ನಲಾಗಿದೆ.
ಶ್ರೀನಗರ (ನ.15): ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಬಳಿ ಕಡಿದಾದ ಇಳಿಜಾರಿನಲ್ಲಿ ಸುಮಾರು 200 ಮೀಟರ್ ಕೆಳಗೆ ಬಸ್ಸೊಂದು ಉರುಳಿಬಿದ್ದ ಪರಿಣಾಮ 38 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಕಿಶ್ತ್ವಾರ್‌ನಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಅಸ್ಸಾರ್ ಪ್ರದೇಶದ ಟ್ರುಂಗಲ್ ಬಳಿ ಕಡಿದಾದ ಇಳಿಜಾರಿನಲ್ಲಿ ಬಸ್ ಪಲ್ಟಿಯಾಗಿ ಈ ದಾರುಣ ಘಟನೆ ಸಂಭವಿಸಿದೆ. ಬಸ್‌ನಲ್ಲಿ 55 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಪೊಲೀಸ್ ಮತ್ತು ರಕ್ಷಣಾ ತಂಡಗಳು ಸೇರಿದಂತೆ ಸ್ಥಳೀಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲು ಮತ್ತು ದುರಂತದ ವ್ಯಾಪ್ತಿಯನ್ನು ನಿರ್ಣಯಿಸಲು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ದೋಡಾದ ಪೊಲೀಸ್ ನಿಯಂತ್ರಣ ಕೊಠಡಿಯ ಪ್ರಾಥಮಿಕ ವರದಿಗಳು ಸಾವಿನ ಸಂಖ್ಯೆ 20 ಅಥವಾ ಅದಕ್ಕಿಂತ ಹೆಚ್ಚಿರಬಹುದು ಎಂದು ಈ ಮೊದಲು ತಿಳಿಸಿತ್ತು “ಪ್ರಯಾಣಿಕ ಬಸ್, ಕಿಶ್ತ್ವಾರ್‌ನಿಂದ ಜಮ್ಮುವಿಗೆ ತೆರಳುತ್ತಿದ್ದಾಗ, ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದ ಟ್ರುಂಗಲ್ ಬಳಿಯ 200 ಮೀಟರ್ ಕೆಳಗೆ ಬಿದ್ದಿದೆ. ಹತ್ತು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸ್ ನಿಯಂತ್ರಣ ಕೊಠಡಿ ದೋಡಾದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಾಳುಗಳನ್ನು ತುರ್ತು ಚಿಕಿತ್ಸೆಗಾಗಿ ಸಮೀಪದ ಆರೋಗ್ಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಇದುವರೆಗೆ 38 ಜನರು ಸಾವನ್ನಪ್ಪಿದ್ದಾರೆ ಎಂದು ಎಸ್‌ಎಸ್‌ಪಿ ದೋಡಾ ಅಬ್ದುಲ್ ಖಯೂಮ್ ಮಾಹಿತಿ ನೀಡಿದ್ದಾರೆ. ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ತೀವ್ರ ದುಃಖವನ್ನು ವ್ಯಕ್ತಪಡಿಸಿದ್ದಾರೆ ಮತ್ತು ದುಃಖಿತ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
"ದೋಡಾದ ಅಸ್ಸಾರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ. ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆಡಳಿತಕ್ಕೆ ನಿರ್ದೇಶನ ನೀಡಿದ್ದೇನೆ' ಎಂದು ಎಲ್‌ಜಿ ಮನೋಜ್ ಸಿನ್ಹಾ ಹೇಳಿದ್ದಾರೆ.
ಗಾಯಾಳುಗಳನ್ನು ಸಾಗಿಸಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಹೇಳಿದ್ದು, ಗಾಯಗೊಂಡವರನ್ನು ಅಗತ್ಯಕ್ಕೆ ಅನುಗುಣವಾಗಿ ಜಿಲ್ಲಾ ಆಸ್ಪತ್ರೆ ಕಿಶ್ತ್ವಾರ್ ಮತ್ತು ಜಿಎಂಸಿ ದೋಡಾಕ್ಕೆ ಸ್ಥಳಾಂತರಿಸಲಾಗಿದೆ. ಹೆಚ್ಚು ಗಾಯಗೊಂಡವರನ್ನು ಸ್ಥಳಾಂತರಿಸಲು ಹೆಲಿಕಾಪ್ಟರ್ ಸೇವೆಯನ್ನು ವ್ಯವಸ್ಥೆಗೊಳಿಸಲಾಗುವುದು. ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲಾಗಿದೆ ಎಂದಿದ್ದಾರೆ.
ಮಹಾರಾಷ್ಟ್ರ ಬಸ್ ದುರಂತಕ್ಕೆ ‘ರೋಡ್ ಹಿಪ್ನೋಸಿಸ್’ ಕಾರಣ: 25 ಜನರ ಜೀವವನ್ನೇ ತೆಗೆದ ಈ ಸಮಸ್ಯೆ!
ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಕೆಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಭೀಕರ ಬಸ್ ಅಪಘಾತ: ಸವಿನಿದ್ರೆಯಲ್ಲಿದ್ದ 25 ಮಂದಿ ಸಜೀವ ದಹನ
ದೋಡಾ ಬಸ್ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಘಟನೆ ಬಗ್ಗೆ ತಿಳಿದ ತಕ್ಷಣವೇ ಮೋದಿ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಮೋದಿ ಘೋಷಣೆ ಮಾಡಿದ್ದಾರೆ. ಗಾಯಾಳುಗಳಲ್ಲಿ 6 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಬಂದಿದೆ.
