ಕೋಲ್ಕತಾ (ಡಿ. 11)   ಬಿಜೆಪಿ ಮತ್ತು ಮಮತಾ ಬ್ಯಾನರ್ಜಿ ನಡುವಿನ ತಿಕ್ಕಾಟ ಇನ್ನು ಒಂದು ಹೆಜ್ಜೆ ಮುಂದಕ್ಕೆ ಹೋಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಭೇಟಿ ವೇಳೆ ನಡೆದಿದ್ದ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿ ಕೇಂದ್ರ ಗೃಹ ಸಚಿವಾಲಯ ನೀಡಿದ್ದ  ಸಮನ್ಸ್ ಅನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಧಿಕ್ಕರಿಸಿದ್ದಾರೆ.

ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿ ವಿವರಣೆ ನೀಡಲು  ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿಪಿ)ರಿಗೆ ಕೇಂದ್ರ ಗೃಹ ಸಚಿವಾಲಯ ನೀಡಿದ ಸಮನ್ಸ್   ನೀಡಿತ್ತು. ಡಿಸೆಂಬರ್ 14 ರಂದು ದೆಹಲಿಗೆ ಬಂದು ವಿವರಣೆ ನೀಡಿ ಎಂದಿತ್ತು.

ಜೆಪಿ ನಡ್ಡಾ ಮೇಲೆ ದಾಳಿ; ಮುಖಂಡರಿಗೆ ಗಾಯ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರಿಗೆ ಪತ್ರ ಬರೆದಿದ್ದು, ಡಿಸೆಂಬರ್ 14 ರಂದು ಸಭೆ ಕರೆದು, ಸಭೆಯಲ್ಲಿ ರಾಜ್ಯ ಅಧಿಕಾರಿಗಳ ಉಪಸ್ಥಿತಿಯೊಂದಿಗೆ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲು ನಿರ್ದೇಶಿಸಲಾಗಿದೆ ಎಂದು ಹೇಳಿದ್ದರು. ಈ ಮೂಲಕ ಡಿಸೆಂಬರ್ 14 ರಂದು ದೆಹಲಿಗೆ ಬರಲು ಸಾಧ್ಯವಿಲ್ಲ ಎಂಬ ಉತ್ತರ ಕೊಟ್ಟಿದ್ದರು.

ಜೆಪಿ ನಡ್ಡಾ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುವ ಡೈಮಂಡ್ ಹಾರ್ಬರ್‌ಗೆ ಲೋಕಸಭಾ ಕ್ಷೇತ್ರಕ್ಕೆ ಗುರುವಾರ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ಸಿಬ್ಬಂದಿ ಮೇಲೆ ಕಲ್ಲು ಮತ್ತು ದೊಣ್ಣೆಗಳಿಂದ  ದುಷ್ಕರ್ಮಿಗಳು ಹಲ್ಲೆ ಮಾಡಿದ್ದರು. ಘಟನೆಯಲ್ಲಿ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯಾ ಮತ್ತು ಮುಕುಲ್ ರಾಯ್ ಗಾಯಗೊಂಡಿದ್ದರು. ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿ ಸಮನ್ಸ್ ನೀಡಲಾಗಿತ್ತು.