Delhi railway station stampede: ನವದೆಹಲಿ ರೈಲು ನಿಲ್ದಾಣದಲ್ಲಿ ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ ತುಂಬಿದ್ದ ರೈಲಿನಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವರು ಸಾವನ್ನಪ್ಪಿದ್ದಾರೆ.

ನವದೆಹಲಿ (ಫೆ.16): ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ ತುಂಬಿದ್ದ ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ದುರ್ಘಟನೆಯಲ್ಲಿ 15 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಳೆದ ಜ.29ರಂದು ಮೌನಿ ಅಮಾವಾಸ್ಯೆಯಂದು ಪ್ರಯಾಗ್‌ರಾಜ್‌ನ ಕುಂಭಮೇಳ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿ 30 ಜನರು ಸಾವನ್ನಪ್ಪಿದ ಭೀಕರ ಘಟನೆ ಮಾಸುವ ಮುನ್ನವೇ ಈ ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧ ಪ್ರಧಾನಿ ಮೋದಿ, ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಸಕ್ಸೇನಾ ಸೇರಿ ಗಣ್ಯರು ಕಂಬನಿ ಮಿಡಿದಿದ್ದಾರೆ.

ಘಟನೆ ಸಂಭವಿಸಿದ್ದು ಹೇಗೆ?

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳುವವರಿಗೆ ಅನುಕೂಲ ಮಾಡಿಕೊಡಲು 2 ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ರೈಲುಗಳಿಗೂ ಮುನ್ನ ತೆರಳಬೇಕಿದ್ದ ಭುವನೇಶ್ವರ ರಾಜಧಾನಿ ಮತ್ತು ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್‌ ರೈಲುಗಳು ತಡವಾದ ಕಾರಣ ರೈಲು ನಿಲ್ದಾಣದಲ್ಲಿ ಒಮ್ಮೆಗೆ ಪ್ರಯಾಣಿಕರ ಸಂಖ್ಯೆಯಲ್ಲಿಯೂ ಭಾರಿ ಹೆಚ್ಚಳವಾಗಿದೆ.

ಇದನ್ನೂ ಓದಿ: ವಕುಂಭಮೇಳ ಕಾಲ್ತುಳಿತ ಸಾವಲ್ಲೂ ರಾಜಕೀಯ, 2000 ಭಕ್ತರು ಬಲಿಯಾಗಿದ್ದು ಸುಳ್ಳು: ಯೋಗಿ

ಈ ನಡುವೆ ರಾತ್ರಿ 9.55ರ ವೇಳೆಗೆ ಫ್ಲಾಟ್‌ಫಾರ್ಮ್‌ 14-15ಕ್ಕೆ ಪ್ರಯಾಗ್‌ರಾಜ್‌ಗೆ ಹೊರಟ ವಿಶೇಷ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಈ ವೇಳೆ ಸಾವಿರಾರು ಜನರು ಏಕಾಏಕಿ ರೈಲಿನೊಳಗೆ ನುಗ್ಗುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ರೈಲಿನ ಒಳಗೆ ಮತ್ತು ಹೊರಗೆ ಕಾಲ್ತುಳಿಸ ಸಂಭವಿಸಿ, ಮಹಿಳೆಯರು, ಮಕ್ಕಳು ಸೇರಿ 15 ಜನರು ಸಾವನ್ನಪ್ಪಿದ್ದಾರೆ. ಹಲವರು ಘಟನೆಯಲ್ಲಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭೇಟಿ ನೀಡಿದ್ದು, ತನಿಖೆಗೆ ಆದೇಶಿಸಿದ್ದಾರೆ.

Scroll to load tweet…