ನಿತೀಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಎನ್‌ಡಿಎ ನಾಯಕರ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಎನ್‌ಡಿಎ ಕೂಟವು ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದೆ.
ಪಟನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ಪದಗ್ರಹಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎನ್‌ಡಿಎ ಒಕ್ಕೂಟದ ಘಟಾನುಘಟಿ ನಾಯಕರು ಭಾಗಿಯಾಗಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ, ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸಹ ಪದಗ್ರಹಣದಲ್ಲಿ ಭಾಗಿಯಾಗಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಪ್ರಮಾಣವಚನವನ್ನು ಸ್ವೀಕರಿಸಿದರು. 26 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಪಟನಾದ ಗಾಂಧಿ ಮೈದಾನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ ನಡೆಸಿದ್ದು, ಇಡೀ ನಗರ ಕೇಸರಿಮಯವಾಗಿತ್ತು. ಈ ಬಾರಿ ಬಿಜೆಪಿ ಮತ್ತು ಜೆಡಿಯು ಸಮಾನ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದವು. ಈ ಮೂಲಕ ಎನ್‌ಡಿಎ ಶಕ್ತಿ ಪ್ರದರ್ಶನ ಮಾಡುವ ಮೂಲಕ ವಿಪಕ್ಷಗಳಿಗೆ ಶಾಕ್ ನೀಡಿವೆ. ಗಾಂಧಿ ಮೈದಾದನಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಜನರು ಸೇರ್ಪಡೆಯಾಗಿದ್ದಾರೆ.
ಬಿಜೆಪಿ-ಜೆಡಿಯು-ಎಲ್‌ಜೆಪಿ ಮೈತ್ರಿ
ಬಿಜೆಪಿ ತಾನು ಸ್ಪರ್ಧಿಸಿದ್ದ 101ರ ಪೈಕಿ 89ರಲ್ಲಿ, ಜೆಡಿಯು 101ರ ಪೈಕಿ 85ರಲ್ಲಿ, ಎಲ್‌ಜೆಪಿ 29ರ ಪೈಕಿ 19ರಲ್ಲಿ, ಎಚ್‌ಎಎಂ 6ರ ಪೈಕಿ 4ರಲ್ಲಿ ಜಯ ಸಾಧಿಸಿ ಎನ್‌ಡಿಎ ಕೂಟಕ್ಕೆ ಭರ್ಜರಿ ಜಯ ತಂದುಕೊಟ್ಟಿವೆ. ಮತ್ತೊಂದೆಡೆ ಆರ್‌ಜೆಡಿ 143ರ ಪೈಕಿ ಕೇವಲ 25, ಕಾಂಗ್ರೆಸ್ 61ರ ಪೈಕಿ ಕೇವಲ 6 ಸ್ಥಾನಗಳಲ್ಲಿ ಗೆದ್ದು ಹೀನಾಯ ಸೋಲಿಗೆ ಸಾಕ್ಷಿಯಾಗಿವೆ. ಇತರರು 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ದಾಖಲೆಯ 67.13ರಷ್ಟು ಮತದಾನ ಆಗಿದೆ. ನ.6 ಮತ್ತು 11ರಂದು ಎರಡು ಹಂತದಲ್ಲಿ ರಾಜ್ಯದ 243 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 2,616 ಅಭ್ಯರ್ಥಿಗಳು ಕಣದಲ್ಲಿದ್ದರು.


