ಫ್ರಾನ್ಸ್‌ನಲ್ಲಿ ನಡೆಯಲಿರುವ ಜಿ7 (G7) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಜೂನ್ 17 ರಂದು ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ.
ನವದೆಹಲಿ (ಜೂ.13) ಭಾರತದ ತೈಲ ಟ್ಯಾಂಕರ್ ಗುರಿಯಾಗಿಸಿ ಅಮೆರಿಕ ನಡೆಸಿದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟಿದ್ದಾರೆ. ಈ ಘಟನೆಯಿಂದ ಭಾರತ ಹಾಗೂ ಅಮೆರಿಕ ನಡುವಿನ ಸಂಬಂಧ ಕುರಿತು ಪ್ರಶ್ನೆಗಳು ಮೂಡುತ್ತಿರುವಾಗಲೇ ಇದೀಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಫ್ರಾನ್ಸ್‌ನ ಇವಿಯಾನ್ (Evian) ನಗರದಲ್ಲಿ ಜೂನ್ 16 ಮತ್ತು 17 ರಂದು ಜಿ7 ಶೃಂಗಸಭೆ ಆಯೋಜನೆಗೊಂಡಿದೆ. ಇದೇ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.
16 ತಿಂಗಳ ಬಳಿಕ ಮೋದಿ ಟ್ರಂಪ್ ಭೇಟಿ
ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರ ವಿಶೇಷ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಿ7 ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಜಾಗತಿಕ ವೇದಿಕೆಯ ಪಕ್ಕದಲ್ಲೇ ಜೂನ್ 17 ರಂದು ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಮುಖಾಮುಖಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಅಮೆರಿಕದ ಹಿರಿಯ ಆಡಳಿತ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. 2024 ರ ನವೆಂಬರ್ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆದ್ದ ನಂತರ, 2025 ರ ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ವಾಷಿಂಗ್ಟನ್‌ಗೆ ಭೇಟಿ ನೀಡಿದ್ದರು. ಅದಾದ ಬಳಿಕ ಕಳೆದ 16 ತಿಂಗಳುಗಳಲ್ಲಿ ಉಭಯ ನಾಯಕರ ನಡುವೆ ನಡೆಯುತ್ತಿರುವ ಮೊದಲ ಮುಖಾಮುಖಿ ದ್ವಿಪಕ್ಷೀಯ ಮಾತುಕತೆ ಇದಾಗಿದೆ.
ಭಾರತ ಮತ್ತು ಅಮೆರಿಕ ನಡುವೆ ದ್ವಿಪಕ್ಷೀಯ ಮುಕ್ತ ವ್ಯಾಪಾರ ಒಪ್ಪಂದದ (Bilateral Trade Pact) ಮಾತುಕತೆಗಳು ಅಂತಿಮ ಹಂತ ತಲುಪುತ್ತಿದ್ದು, ಜುಲೈ ಮಧ್ಯಭಾಗದ ವೇಳೆಗೆ ಮೊದಲ ಹಂತದ ಒಪ್ಪಂದಕ್ಕೆ ಸಹಿ ಬೀಳುವ ಸಾಧ್ಯತೆಯಿದೆ. ಈ ಕುರಿತು ಉಭಯ ನಾಯಕರು ಪ್ರಮುಖ ನಿರ್ಧಾರ ಕೈಗೊಳ್ಳಲಿದ್ದಾರೆ.
ಭಾರತೀಯ ನಾವಿಕ ಸಾವಿನ ಘಟನೆ ಚರ್ಚೆ
ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಇತ್ತೀಚೆಗೆ ಓಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟಿದ್ದರು. ಈ ಘಟನೆಯ ಬಗ್ಗೆ ನವದೆಹಲಿ ಈಗಾಗಲೇ ಅಮೆರಿಕಕ್ಕೆ ತನ್ನ ತೀವ್ರ ಆಕ್ಷೇಪಣೆಯನ್ನು ಸಲ್ಲಿಸಿದ್ದು, ಈ ಸೂಕ್ಷ್ಮ ಜಾಗತಿಕ ಭದ್ರತೆಯ ವಿಚಾರವೂ ಚರ್ಚೆಗೆ ಬರಲಿದೆ.


