ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಎಸ್‌ಐಟಿ (ವಿಶೇಷ ತನಿಖಾ ದಳ) ಬಿ ರಿಪೋರ್ಟ್ ಸಲ್ಲಿಸಿದ ಬೆನ್ನಲ್ಲೇ ಇದೀಗ ಎಸ್‌ಐಟಿ ರಚನೆಯನ್ನೇ ಪ್ರಶ್ನಿಸಿ ಸಂತ್ರಸ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ನವದೆಹಲಿ (ಫೆ.12): ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ((Ramesh Jarkiholi)) ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಎಸ್‌ಐಟಿ (ವಿಶೇಷ ತನಿಖಾ ದಳ) ಬಿ ರಿಪೋರ್ಟ್ (B Report) ಸಲ್ಲಿಸಿದ ಬೆನ್ನಲ್ಲೇ ಇದೀಗ ಎಸ್‌ಐಟಿ ರಚನೆಯನ್ನೇ ಪ್ರಶ್ನಿಸಿ ಸಂತ್ರಸ್ತೆ ಸುಪ್ರೀಂಕೋರ್ಟ್ (Supreme Court) ಮೆಟ್ಟಿಲೇರಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ತನಿಖೆ ನಡೆಸಿರುವ ಎಸ್‌ಐಟಿ (SIT) ವರದಿ ಮೇಲೆ ನನಗೆ ನಂಬಿಕೆಯಿಲ್ಲ ಎಂದು ಸಂತ್ರಸ್ತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಸೋಮವಾರ ಅರ್ಜಿ ವಿಚಾರಣೆಗೆ ಬರಲಿದೆ.
ಪ್ರಕರಣದಲ್ಲಿ ಎಸ್‌ಐಟಿ ರಚನೆಯೇ ಸರಿ ಇಲ್ಲ. ಸರ್ಕಾರ ಸ್ವಯಂ ಪ್ರೇರಿತವಾಗಿ ಎಸ್‌ಐಟಿ ರಚನೆ ಮಾಡಿಲ್ಲ. ಪರಿಸ್ಥಿತಿ ಹೀಗಿದ್ದಾಗ ಎಸ್‌ಐಟಿ ವರದಿಯನ್ನು ಕೋರ್ಟಿಗೆ ಸಲ್ಲಿಕೆ ಮಾಡಿ, ವಿಚಾರಣೆ ನಡೆಸುವುದು ಎಷ್ಟುಸರಿ? ಹೀಗಾಗಿ ಎಸ್‌ಐಟಿ ವರದಿ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ರಮೇಶ್ ಜಾರಕಿಹೊಳಿ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ತನಿಖೆ ನಡೆಸಿದ್ದ ಎಸ್‌ಐಟಿಯು ಬೆಂಗಳೂರಿನ ಹೆಚ್ಚುವರಿ ಮೆಟ್ರೋ ಪಾಲಿಟನ್ ಮ್ಯಾಜಿಸ್ಪ್ರೇಟ್ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿತ್ತು. ಆದರೆ, ಎಸ್‌ಐಟಿ ರಚನೆ ಕುರಿತೇ ಆಕ್ಷೇಪ ವ್ಯಕ್ತಪಡಿಸಿದ್ದ ಸಂತ್ರಸ್ತೆ ಪರ ವಕೀಲರು ಈ ವರದಿಯ ಮೇಲೆ ತಮಗೆ ನಂಬಿಕೆ ಇಲ್ಲ ಎಂದು ಮೊದಲೇ ಹೇಳಿದ್ದರು.
Karnataka Politics: ಸಚಿವ ಸ್ಥಾನ ಕಳೆದುಕೊಂಡಿದ್ದ ಜಾರಕಿಹೊಳಿಗೆ ರಿಲೀಫ್, ಮುಂದಿನ ನಡೆ ಏನು.?
ಸಿಡಿ ಕೇಸ್ ತನಿಖಾ ವರದಿ ಸಲ್ಲಿಕೆಗೆ ಅಸ್ತು: ಅತ್ಯಾಚಾರ ಆರೋಪ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತೆ ನಗರದ ಕಬ್ಬನ್ ಪಾರ್ಕ್ ಠಾಣಾ ಪೊಲೀಸರಿಗೆ ದಾಖಲಿಸಿದ ದೂರಿನ ತನಿಖಾ ವರದಿಯನ್ನು ಸಕ್ಷಮ ವಿಚಾರಣಾ ನ್ಯಾಯಾಲಯಕ್ಕೆ (ಮ್ಯಾಜಿಸ್ಪ್ರೇಟ್ ಕೋರ್ಟ್) ಸಲ್ಲಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ತನಿಖಾಧಿಕಾರಿಗೆ ಅನುಮತಿ ನೀಡಿ ಹೈಕೋರ್ಟ್ (High Court) ಗುರುವಾರ ಆದೇಶಿಸಿದೆ.
ರಮೇಶ್ ಜಾರಕಿಹೊಳಿ ‘ಸಿಡಿ’ ಪ್ರಕರಣ ಕುರಿತ ತನಿಖೆಯ ಅಂತಿಮ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ವಿಶೇಷ ತನಿಖಾ ತಂಡ (SIT) ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.
ರಮೇಶ್ ಜಾರಕಿಹೊಳಿ ವಿರುದ್ಧದ ಅತ್ಯಾಚಾರ ಹಾಗೂ ಇತರೆ ಆರೋಪ ಕುರಿತು ಸಂತ್ರಸ್ತ ಯುವತಿ 2021ರ ಮಾ.26ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದಾಖಲಿಸಿರುವ ದೂರಿಗೆ ಸಂಬಂಧಿಸಿದ ಪ್ರಕರಣದ ತನಿಖೆ ಈಗಾಗಲೇ ಪೂರ್ಣಗೊಂಡಿದೆ. ತನಿಖಾ ವರದಿಗೆ ಎಸ್‌ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಅನುಮೋದನೆ ನೀಡಿದ್ದಾರೆ. ಹಾಗಾಗಿ, ತನಿಖಾ ವರದಿಯನ್ನು ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸುವುದರಿಂದ ಎಸ್‌ಐಟಿಯನ್ನು ನಿರ್ಬಂಧಿಸಲು ಸೂಕ್ತ ಕಾರಣಗಳು ಇಲ್ಲ. ಆದ್ದರಿಂದ ಎಸ್‌ಐಟಿ ತನಿಖಾಧಿಕಾರಿಯು ತನಿಖಾ ವರದಿಯನ್ನು ಸಕ್ಷಮ ಮ್ಯಾಜಿಸ್ಪ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಬಹುದು ಎಂದು ಅನುಮತಿ ನೀಡಿ ಪೀಠ ಆದೇಶಿಸಿತು.
CD Scandal: ತನಿಖಾ ವರದಿ ಸಲ್ಲಿಸಲು SITಗೆ ಹೈಕೋರ್ಟ್ ಅನುಮತಿ, ರಮೇಶ್ ಜಾರಕಿಹೊಳಿಗೆ ಆತಂಕ!
ಅಲ್ಲದೆ, ಪ್ರಕರಣದ ತನಿಖೆ ನಡೆಸುವ ಅಧಿಕಾರ ವ್ಯಾಪ್ತಿ ಎಸ್‌ಐಟಿ ಮತ್ತು ಅದರ ತನಿಖಾಧಿಕಾರಿ ಹೊಂದಿದ್ದಾರೆಯೇ ಎಂಬುದು ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಇತರೆ ಎಲ್ಲ ಪ್ರಶ್ನೆಗಳನ್ನು ಮ್ಯಾಜಿಸ್ಪ್ರೇಟ್ ನ್ಯಾಯಾಧೀಶರ ಪರಿಗಣನೆಗೆ ಮುಕ್ತವಾಗಿರಿಸಲಾಗಿದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು. ಹಾಗೆಯೇ, ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿ ನಗರ ಪೊಲೀಸ್ ಆಯುಕ್ತರು ಹೊರಡಿಸಿರುವ ಆದೇಶದ ಸಾಂವಿಧಾನಿಕ ಸಿಂಧುತ್ವವನ್ನು ಪರಿಗಣಿಸುವುದಾಗಿ ತಿಳಿಸಿದ ನ್ಯಾಯಪೀಠ ವಿಚಾರಣೆಯನ್ನು ಮಾ.9ಕ್ಕೆ ಮುಂದೂಡಿದೆ.
