ರಾಹುಲ್ ಗಾಂಧಿಯವರ 'ಮತ ಕಳ್ಳತನ' ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಿದ್ದರೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಬೆಂಗಳೂರು, (ಆ.9): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ 'ಮತ ಕಳ್ಳತನ' ಆರೋಪಕ್ಕೆ ತಿರುಗೇಟು ನೀಡಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ), ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಿದ್ದರೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲೋಕಸಭೆ ಹಾಗೂ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.
ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಮಾತನಾಡಿ, ರಾಹುಲ್ ಗಾಂಧಿಯವರು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದು, ಚುನಾವಣಾ ಆಯೋಗವು ಅಫಿಡವಿಟ್‌ಗೆ ಸಹಿ ಹಾಕುವಂತೆ ಕೇಳಿದಾಗ ಪುರಾವೆ ನೀಡಲು ನಿರಾಕರಿಸಿದ್ದಾರೆ ಎಂದು ಟೀಕಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ 'ಮತದಾರರ ಹಕ್ಕುಗಳ ರ್ಯಾಲಿ'ಯಲ್ಲಿ ರಾಹುಲ್ ಗಾಂಧಿ, 2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಕಲಿ ಮತದಾರರ ಸೇರ್ಪಡೆಯಾಗಿದೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಭಾಟಿಯಾ, ರಾಹುಲ್ ಅಲಿಯಾಸ್ 'ಅರಾಜಕತಾವಾದಿ' ಈಗ ರಾಹುಲ್ ಅಲಿಯಾಸ್ 'ವಿಧ್ವಂಸಕ'ನಾಗಿದ್ದಾನೆ. ಅವರು ಭಾರತದ ಸಂವಿಧಾನ ಮತ್ತು ಭಾರತೀಯ ಪ್ರಜಾಪ್ರಭುತ್ವವನ್ನು ನಾಶಮಾಡಲು ಬಯಸುತ್ತಾರೆ ಟೀಕಿಸಿದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಗಾಂಧಿ ಅವರು 'ಅಪಕ್ವ' ಮತ್ತು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಬೆದರಿಕೆ ಹಾಕುವ ಮೂಲಕ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಯುದ್ಧ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಚುನಾವಣಾ ಆಯೋಗವು ನಿಷ್ಪಕ್ಷಪಾತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿದ ಭಾಟಿಯಾ, ಕಾಂಗ್ರೆಸ್ ಆಡಳಿತದ ಕರ್ನಾಟಕ, ತೆಲಂಗಾಣ ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳೂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. 'ನಿಮಗೆ ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಿದ್ದರೆ, ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಿ' ಎಂದು ಅವರು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು.
