ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಆಕ್ರಮ ಕಂಡುಬಂದರೆ ಮುಂದಿನ ಸೆಪ್ಟೆಂಬರ್ ವೇಳೆಗೆ ಹೊಸ ಪಟ್ಟಿ ಪರಿಷ್ಕರಣೆಗೆ ತಡೆ ಒಡ್ಡುವುದಾಗಿ ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ಆಧಾರ್ ಕಾರ್ಡ್ ಮತ್ತು ವೋಟರ್ ಐಡಿ ನಾಗರಿಕತ್ವದ ಸಾಕ್ಷಿಯಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನವದೆಹಲಿ (ಆ.13): ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ಮತಪಟ್ಟಿ ಪರಿಷ್ಕರಣೆಯಲ್ಲಿ ಆಕ್ರಮವೇನಾದರೂ ಕಂಡು ಬಂದರೆ ಮುಂದಿನ ಸೆಪ್ಟೆಂಬರ್ ವೇಳೆಗೆ ಇಡೀ ಹೊಸ ಮತದಾರರ ಪಟ್ಟಿ ಪರಿಷ್ಕರಣೆಗೆ ತಡೆ ಒಡ್ಡುತ್ತೇವೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ, ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳಿರುವಾಗ ಬಿಹಾರದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಮುಂದಾಗಿರುವ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯವು ಮಂಗಳವಾರ ಇಂಥದ್ದೊಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಇದೇ ವೇಳೆ ಆಧಾರ್ ಕಾರ್ಡ್ ಹಾಗೂ ವೋಟರ್ ಐಡಿಯನ್ನು ನಾಗರಿಕತ್ವವನ್ನು ಸಾಬೀತುಪಡಿಸುವ ದಾಖಲೆ ಎಂದು ಪೂರ್ಣವಾಗಿ ಪರಿಗಣಿಸಲಾಗದು. ನಾಗರಿಕತ್ವದ ವಿಚಾರವನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂಬ ಚುನಾವಣಾ ಆಯೋಗದ ವಾದವನ್ನು ಸುಪ್ರೀಂ ಕೋರ್ಟ್ ಬೆಂಬಲ ವ್ಯಕ್ತಪಡಿಸಿದೆ.