ಶ್ರೀಕಾಕುಲಂ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮಹಿಳೆಯರು ಮಕ್ಕಳು ಸೇರಿ 9 ಸಾವು, ಏಕಾದಶಿ ವಿಶೇಷ ಪೂಜೆ ಪ್ರಯುಕ್ತ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆಯಲು ನಿಂತಿರುವ ವೇಳೆ ಕಾಲ್ತುಳಿತ ಸಂಭವಿಸಿದೆ.
ಶ್ರೀಕಾಕುಲಂ (ನ.01) ಶ್ರೀಕಾಕುಳಂನ ಪ್ರಸಿದ್ಧ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದೆ. ಏಕಾದಶಿಯಂದು ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ. ಹೀಗಾಗಿ ಅಪಾರ ಪ್ರಮಾಣದಲ್ಲಿ ಭಕ್ತರು ಆಗಮಿಸಿ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ನಿಂತಿರುವವ ವೇಳೆ ಕಾಲ್ತುಳಿತ ಸಂಭವಿಸಿದೆ. ಪರಿಣಾಮ 09 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟ ಭಕ್ತರಲ್ಲಿ ಬಹುತೇಕರು ಮಕ್ಕಳು ಹಾಗೂ ಮಹಿಳೆಯರು ಎಂದು ವರದಿಯಾಗಿದೆ. ಸರಿಯಾದ ವ್ಯವಸ್ಥೆಗಳನ್ನು ಮಾಡದೇ ಇರುವುದು ಈ ಕಾಲ್ತುಳಿತಕ್ಕೆ ಕಾರಣ ಎಂಬುದು ಪ್ರಾಥಮಿಕ ವರದಿಗಳು ಹೇಳುತ್ತಿದೆ.
ಹಲವು ಭಕ್ತರಿಗೆ ಗಾಯ
ಸರದಿ ಸಾಲಿನಲ್ಲಿ ಬಂದು ಪೂಜೆ ನೆರವೇರಿಸುತ್ತಿರು ವೇಳೆ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಕಾರಣ ಸ್ಪಷ್ಟವಾಗಿಲ್ಲ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸುಮಾರು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಭಕ್ತರನ್ನು ಸ್ಥಳದಿಂದ ಹೊರಕ್ಕೆ ಕಳುಹಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದೆ.
ಕಾರ್ತಿಕಮಾಸದ ಏಕಾದಶಿ ಸೇರಿದ ಭಕ್ತರು
ಕಾರ್ತಿಕಮಾಸದ ಏಕಾದಶಿ ಕಾರಣ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಪರಿಣಾಮ ಕಾಲ್ತುಳಿತ ಸಂಭವಿಸಿದೆ. ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಭಕ್ತರು ಸೇರಿದ ಕಾರಣ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ. ದೇವಸ್ಥಾನದಲ್ಲಿ ಸರಿಯಾದ ವ್ಯವಸ್ಥೆ ಮಾಡಿಲ್ಲ ಅನ್ನೋ ಆರೋಪಗಳು ಕೇಳಿಬಂದಿದೆ. ಹೆಚ್ಚಿನ ಪ್ರಮಾಣದಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದ್ದರೂ, ದೇವಸ್ಥಾನದ ಬಳಿ ಸೂಕ್ತ ವ್ಯವಸ್ಥೆ ಪ್ರಮುಖವಾಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಿಲ್ಲ ಎಂದು ಭಕ್ತರು ದೂರಿದ್ದಾರೆ. ಸ್ಥಳದಲ್ಲಿ ಪೊಲೀಸರು, ರಕ್ಷಣಾ ತಂಡಗಳು ಕಾರ್ಯನಿರ್ವಹಿಸುತ್ತಿದೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲ ತಕ್ಷಣವೇ ರಕ್ಷಣಾ ಕಾರ್ಯಾಚರಣೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ಸೂಚಿಸಿದ್ದಾರೆ.
25 ಸಾವಿರಕ್ಕೂ ಹೆಚ್ಚು ಭಕ್ತರು ಜಮಾವಣೆ
ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಸಾಮರ್ಥ್ಯ 2 ರಿಂದ 3 ಸಾವಿರ. ಪ್ರತಿ ಶನಿವಾರ ಈ ದೇವಸ್ಥಾನಕ್ಕೆ ಸರಿಸುಮಾರು 1,000 ಮಂದಿ ಆಗಮಿಸುತ್ತಾರೆ. ಇನ್ನುಳಿದ ದಿನ ಸರಾಸರಿ 100 ರಿಂದ 500 ಭಕ್ತರು ಆಗಮಿಸುತ್ತಾರೆ. ಆದರೆ ಏಕಾದಶಿ ಶನಿವಾರದ ಕಾರಣ ಬರೋಬ್ಬರಿ 25,000 ಭಕ್ತರು ಆಗಮಿಸಿದ್ದರು. ಸೂಕ್ತ ವ್ಯವಸ್ಥೆಗಳು ಕಲ್ಪಿಸದ ಕಾರಣ, ಸರಿಯಾದ ನಿರ್ವಹಣೆ ಮಾಡದ ಕಾರಣ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ.
ಕೇಂದ್ರದ ರಾಜ್ಯ ಖಾತೆ ಸಚಿವ ಬಂಡಿ ಸಂಜಯ್ ಕುಮಾರ್ ಘಟನೆಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆ ತೀವ್ರ ನೋವುಂಟು ಮಾಡಿದೆ. ದೇವಸ್ಥಾನಕ್ಕೆ ಆಗಮಿಸಿ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ನನ್ನ ಸಂತಾಪಗಳು, ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಂಡಿ ಸಂಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
