ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಹೈಕೋರ್ಟ್ ಆದೇಶದ ಮೇರೆಗೆ ನಡೆದ ಮರು ಎಣಿಕೆ ಫಲಿತಾಂಶಕ್ಕೆ ಮಧ್ಯಂತರ ತಡೆ ನೀಡಿ, ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ.

ನವದೆಹಲಿ (ಮೇ.12): ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆಗಳ ಮತ ಮರು ಎಣಿಕೆಗೆ ಅತಿದೊಡ್ಡ ತಿರುವು ಸಿಕ್ಕಿದೆ. ಅಂಚೆ ಮತಗಳ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಟಿ.ಡಿ.ರಾಜೇಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮರು ಮತ ಎಣಿಕೆ ಪ್ರಕ್ರಿಯೆ ಮತ್ತು ಅದರಿಂದ ಬಂದ ಫಲಿತಾಂಶಕ್ಕೆ ಮಧ್ಯಂತರ ತಡೆ ನೀಡಿದೆ.

Add Asianetnews Kannada as a Preferred SourcegooglePreferred

ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ. ಅಲ್ಲದೆ, ಮರು ಮತ ಎಣಿಕೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿರುವುದರಿಂದ, ಮರು ಎಣಿಕೆಯಲ್ಲಿ ಜಯಗಳಿಸಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರ ಆಯ್ಕೆ ತಾತ್ಕಾಲಿಕವಾಗಿ ಅಸಿಂಧುವಾಗಿದೆ. ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರ ಶಾಸಕ ಸ್ಥಾನವನ್ನು ಸುಪ್ರೀಂಕೋರ್ಟ್ ಮರುಸ್ಥಾಪಿಸಿದೆ.

ಶೃಂಗೇರಿ ಮರುಮತದಾನ ವಿವಾದದ ಹಿನ್ನೆಲೆ:

2023ರ ವಿಧಾನಸಭಾ ಚುನಾವಣೆಯಲ್ಲಿ 201 ಮತಗಳಿಂದ ಜಯಗಳಿಸಿದ್ದ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರ ಗೆಲುವನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಂಚೆ ಮತಗಳ ಮರು ಎಣಿಕೆಗೆ ಆದೇಶಿಸಿತ್ತು. ಹೈಕೋರ್ಟ್ ಆದೇಶದಂತೆ ಮೇ 2ರಂದು ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಜೀವರಾಜ್ 52 ಮತಗಳಿಂದ ಜಯ ಗಳಿಸಿದ್ದರು. ಬಳಿಕ, ಮೊನ್ನೆಯಷ್ಟೇ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಬಳಿಕ, ಅಂಚೆ ಮತಗಳ ಮರು ಮತ ಎಣಿಕೆ ವೇಳೆ ಅಕ್ರಮ ನಡೆದಿದೆ, ಮತಪತ್ರಗಳಿದ್ದ ಸೀಲ್ಡ್ ಬಾಕ್ಸ್ ತೆರೆಯಲಾಗಿದೆ ಎಂದು ಆರೋಪಿಸಿ, ಹೈಕೋರ್ಟ್‌ ಆದೇಶ ಪ್ರಶ್ನಿಸಿ ರಾಜೇಗೌಡರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾ.ವಿನೋದ್ ಚಂದ್ರನ್ ಅವರಿದ್ದ ವಿಭಾಗೀಯ ಪೀಠ, ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಮರು ಮತ ಎಣಿಕೆ ಪ್ರಕ್ರಿಯೆ ಮತ್ತು ಅದರಿಂದ ಬಂದ ಫಲಿತಾಂಶಕ್ಕೆ ಮಧ್ಯಂತರ ತಡೆ ನೀಡಿದೆ. ಜೊತೆಗೆ, ಮರು ಮತ ಎಣಿಕೆಯ ನಂತರದ ಎಲ್ಲಾ ಬೆಳವಣಿಗೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದ ನ್ಯಾಯಪೀಠ, ಮತ ಮರು ಎಣಿಕೆಗೆ ಸಂಬಂಧಿಸಿದ ಎಲ್ಲಾ ದಾಖಲೆ ಸಲ್ಲಿಸಲು ಸೂಚನೆ ನೀಡಿದೆ. ಮುಂದಿನ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ. ಇದರಿಂದಾಗಿ ಸದ್ಯಕ್ಕೆ ರಾಜೇಗೌಡ ಅವರ ಶಾಸಕತ್ವ ಊರ್ಜಿತವಾಗಿದ್ದು, ಅವರು ಶಾಸಕರಾಗಿ ಮುಂದುವರಿಯಲಿದ್ದಾರೆ.