ನಕಲಿ ಮತದಾನ ತಡೆಯಲು ಮತಗಟ್ಟೆಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಒಪ್ಪಿಕೊಂಡಿದೆ. ಈ ಸಂಬಂಧ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ನವದೆಹಲಿ (ಏ.14): ನಕಲಿ ಮತದಾನ ತಡೆವ ಉದ್ದೇಶದಿಂದ ಮತಗಟ್ಟೆಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಬಯೋಮೆಟ್ರಿಕ್‌ ಗುರುತು ಪತ್ತೆ ವ್ಯವಸ್ಥೆ ಜಾರಿಗೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರಿಂ ಕೋರ್ಟ್‌ ಸೋಮವಾರ ಒಪ್ಪಿಕೊಂಡಿದೆ. ಜತೆಗೆ ಈ ಸಂಬಂಧ ಪ್ರತಿಕ್ರಿಯೆ ಕೋರಿ ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮತ್ತು ಇತರ ಕೆಲವು ರಾಜ್ಯಗಳಿಗೆ ನೋಟಿಸ್‌ ಜಾರಿ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘ಅರ್ಜಿಯಲ್ಲಿ ಮಾಡಲಾದ ವಿನಂತಿಯನ್ನು ಸದ್ಯ ಕೆಲವು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪರಿಗಣಿಸಲಾಗುವುದಿಲ್ಲ. ಆದರೆ ಮುಂದಿನ ಲೋಕಸಭಾ ಚುನಾವಣೆ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ಇದು ಪಾಲನೆಯಾಗುವ ಅಗತ್ಯವಿದೆ’ ಎಂದು ಮುಖ್ಯ ನ್ಯಾ. ಸೂರ್ಯಕಾಂತ್‌ ಹಾಗೂ ನ್ಯಾ. ಜೊಯ್‌ಮಾಲ್ಯ ಬಾಗ್ಚಿ ಅವರಿದ್ದ ಪೀಠ ಸ್ಪಷ್ಟಪಡಿಸಿದೆ.

‘ಲಂಚ, ಅನಗತ್ಯ ಪ್ರಭಾವ ಮತ್ತು ನಕಲಿ ಮತದಾನವು ಚುನಾವಣಾ ಪ್ರಕ್ರಿಯೆಯ ಶುದ್ಧತೆ ಮತ್ತು ಸಮಗ್ರತೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ನಾಗರಿಕರಿಗೆ ಆಗುವ ಹಾನಿ ಅತ್ಯಂತ ದೊಡ್ಡದು. ಹೀಗಾಗಿ ಬೆರಳಚ್ಚು ಮತ್ತು ಕಣ್ಣಿನ ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ಮತಗಟ್ಟೆಗಳಲ್ಲಿ ಜಾರಿಗೆ ತರಬೇಕು. ಈ ಬಗ್ಗೆ ಚು. ಆಯೋಗಕ್ಕೆ ನಿರ್ದೇಶನ ನೀಡಬೇಕು’ ಎಂದು ವಕೀಲ ಅಶ್ವಿನಿ ಕುಮಾರ್‌ ಉಪಾಧ್ಯಾಯ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.