ನವದೆಹಲಿ(ಫೆ.14): ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಹಾಗೂ ಎನ್’ಸಿ ನಾಯಕ ಒಮರ್ ಅಬ್ದುಲ್ಲಾ ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್ ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ನೋಟಿಸ್ ಜಾರಿ ಮಾಡಿದೆ.

ಒಮರ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ)ಅಡಿಯಲ್ಲಿ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂಕೋರ್ಟ್ ಅಬ್ದುಲ್ಲಾ ಸಹೋದರಿ ಸಾರಾ ಅಬ್ದುಲ್ಲಾ ಪೈಲಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.

ನ್ಯಾ. ಅರುಣ್ ಮಿಶ್ರಾ ಹಾಗೂ ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ನ್ಯಾಯಪೀಠ, ಈ ಸಂಬಂಧ ಕೇಂದ್ರಾಡಳಿತ ಪ್ರದೇಶಕ್ಕೆ ನೋಟಿಸ್ ನೀಡಿ ವಿಚಾರಣೆಯನ್ನು ಮಾರ್ಚ್ 2ಕ್ಕೆ ಮುಂದೂಡಿದೆ.

ಓಮರ್ ಅಬ್ದುಲ್ಲಾ ಬಿಳಿ ದಾಡಿ ಫೋಟೋ ಕಂಡು ಕಣ್ಣೀರಿಟ್ಟ ಮಮತಾ!

ಸಾರಾ ಪೈಲಟ್ ಪರ ಕಾಂಗ್ರೆಸ್​ ಹಿರಿಯ ಮುಖಂಡ ಹಿರಿಯ ವಕೀಲ ಕಪಿಲ್​ ಸಿಬಲ್​ ವಾದ ಮಂಡಿಸಿದರು. ಅರ್ಜಿ ವಿಚಾರಣೆ ವೇಳೆ ಜಮ್ಮು ಮತ್ತು ಕಾಶ್ಮೀರ ಅಧಿಕಾರಿಗಳಿಗೆ ಒಮರ್​ ಮುನ್ನೆಚ್ಚರಿಕಾ ಬಂಧನದ ಬಗ್ಗೆ ಉತ್ತರಿಸುವಂತೆ ಸೂಚನೆ ನೀಡಲಾಯಿತು.

ಅಬ್ದುಲ್ಲಾ ಬಂಧನ ವಾಕ್ ಸ್ವಾತಂತ್ರ್ಯ ಸೇರಿದಂತೆ ಸಾಂವಿಧಾನಿಕ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಮತ್ತು ಇದು ಎಲ್ಲಾ ರಾಜಕೀಯ ಪ್ರತಿಸ್ಪರ್ಧಿಗಳನ್ನು ಹತ್ತಿಕ್ಕುವ ಹುನ್ನಾರವಾಗಿದೆ ಎಂದು ಸಾರಾ ಪೈಲಟ್ ಅರ್ಜಿಯಲ್ಲಿ ದೂರಿದ್ದರು.

ಆಗಸ್ಟ್ 5ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ನಂತರ ಒಮರ್ ಅಬ್ದುಲ್ಲಾರನ್ನು ಬಂಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.