ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿದ್ದ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ್ದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜಾಮೀನನ್ನು ರದ್ದುಗೊಳಿಸಬೇಕು.
ನವದೆಹಲಿ (ಅ.18): ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿದ್ದ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ್ದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜಾಮೀನನ್ನು ರದ್ದುಗೊಳಿಸಬೇಕು ಎಂದು ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿದ್ದ ನ್ಯಾಯಪೀಠ, ರಾಜಕೀಯ ಹೋರಾಟಗಳಿಗೆ ನ್ಯಾಯಪೀಠವನ್ನು ವೇದಿಕೆ ಮಾಡಿಕೊಳ್ಳಬೇಡಿ ಎಂದು ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡು, ಅರ್ಜಿಯನ್ನು ವಜಾಗೊಳಿಸಿತು.
ಪ್ರಕರಣವೇನು?
ಮುಖ್ಯಮಂತ್ರಿಯಾಗಿದ್ದಾಗ ಕುಮಾರಸ್ವಾಮಿಯವರು ಸಂಡೂರಿನ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಅಕ್ರಮವಾಗಿ 550 ಎಕರೆ ಗಣಿ ಗುತ್ತಿಗೆ ನೀಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ತನಿಖೆಗೆ ಅವಕಾಶ ನೀಡಬೇಕು ಎಂದು ಲೋಕಾಯುಕ್ತ ಪೊಲೀಸರು 2023ರಲ್ಲಿ ರಾಜ್ಯಪಾಲರ ಅನುಮತಿ ಕೋರಿದ್ದರು. 2024ರಲ್ಲಿ ಆರೋಪಟ್ಟಿ ಸಲ್ಲಿಕೆಯಾಗಿತ್ತು. ಈ ಪ್ರಕರಣದಲ್ಲಿ ಕುಮಾರಸ್ವಾಮಿಯವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ರದ್ದುಗೊಳಿಸಬೇಕು ಎಂದು ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
ಈ ಮಧ್ಯೆ, ಎಚ್ಡಿಕೆಯವರು ಪತ್ರಿಕಾಗೋಷ್ಠಿ ನಡೆಸಿ, ಎಡಿಜಿಪಿ ವಿರುದ್ಧ ಆರೋಪ ಮಾಡಿದ್ದರು. ಚಂದ್ರಶೇಖರ್ ಅವರಿಗೆ ಬೆದರಿಕೆಯೊಡ್ಡಿದ ಆರೋಪದಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ನಾಯಕ ಸುರೇಶ್ ಬಾಬು ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಸಂಜಯನಗರ ಪೊಲೀಸರು ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್ 2025ರ ಮಾರ್ಚ್ 28ರಂದು ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ, ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
