ದೇಶದ ಮುಖ್ಯ ಚುನಾವಣಾಧಿಕಾರಿ ಹಾಗೂ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಯನ್ನು ನೇಮಕ ಮಾಡುವ ಸಮಿತಿಯಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅವರನ್ನೂ ಸೇರಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದೆ.
ನವದೆಹಲಿ (ಫೆ.02): ಪ್ರಧಾನ ಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕವನ್ನು ಮಾಡುತ್ತಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ. ಅದರೊಂದಿಗೆ ಚುನಾವಣಾ ಅಧಿಕಾರಿಗಳ ನೇಮಕ ಮಾಡುವ ಸಮಿತಿಯಲ್ಲಿ ಇನ್ನು ಮುಂದೆ ಸಿಜೆಐ ಕೂಡ ಸ್ಥಾನ ಪಡೆದುಕೊಳ್ಳಲಿದ್ದಾರೆ. ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ, ಸಂಸತ್ತು ಈ ವಿಷಯದ ಬಗ್ಗೆ ಕಾನೂನು ರಚಿಸುವವರೆಗೆ ಈ ನಿಯಮವು ಮುಂದುವರಿಯುತ್ತದೆ ಎಂದು ಹೇಳಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಇಲ್ಲದಿದ್ದರೆ, ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ನೇಮಿಸುವ ಸಮಿತಿಯಲ್ಲಿ ಏಕೈಕ ದೊಡ್ಡ ವಿರೋಧ ಪಕ್ಷದ ನಾಯಕರಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಚುನಾವಣಾ ಆಯುಕ್ತರು ಮತ್ತು ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ಮೇಲೆ ಪೀಠವು ತನ್ನ ತೀರ್ಪು ನೀಡಿದೆ.
