ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದೆ. ಪ್ರಕರಣದ ವಿವರಗಳಿಗೆ ಪೂರ್ತಿ ಓದಿ

ನವದೆಹಲಿ (ಡಿ.3): ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಮಂಗಳವಾರ ಮಧ್ಯಂತರ ತಡೆ ನೀಡಿದೆ.

ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಗೆ ಮೇಲ್ಮನವಿ:

ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್‌ ಆದೇಶದ ವಿರುದ್ಧ ಯಡಿಯೂರಪ್ಪ ಅವರು ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ, ವಿಚಾರಣೆಗೆ ತಡೆ ನೀಡಿತು.

ಬಿಎಸ್‌ವೈ ಪರ ಹಿರಿಯ ವಕೀಲ ಸಿದ್ದಾರ್ಥ್‌ ಲೂತ್ರಾ ವಾದ ಮಂಡಿಸಿ, ಹೈಕೋರ್ಟ್‌ ಆದೇಶದಲ್ಲಿರುವ ಕೆಲ ದೋಷಗಳನ್ನು ಉಲ್ಲೇಖಿಸಿದರು. ಹೈಕೋರ್ಟ್ ಪ್ರಮುಖ ಸಾಕ್ಷ್ಯಗಳನ್ನು ನಿರ್ಲಕ್ಷಿಸಿದೆ. ಆರೋಪಿತರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದಾರೆ ಎಂಬುದನ್ನು ಗಮನಿಸಬೇಕು ಎಂದು ಕೋರ್ಟ್‌ ಗಮನಕ್ಕೆ ತಂದರು. ವಾದ ಆಲಿಸಿದ ನ್ಯಾಯಪೀಠ, ವಿಚಾರಣೆಗೆ ಮಧ್ಯಂತರ ತಡೆ ನೀಡಿತು. ಇದರಿಂದಾಗಿ ಯಡಿಯೂರಪ್ಪನವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಪ್ರಕರಣವೇನು?:

ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಬಿಎಸ್‌ವೈ ಮೇಲಿದೆ. ಸಹಾಯ ಕೇಳಿ ಬಂದಾಗ ಯಡಿಯೂರಪ್ಪನವರು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 2024ರ ಮಾರ್ಚ್‌ನಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದರು.

ಪೋಕ್ಸೋ ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿತ್ತು. ಈ ಪ್ರಕರಣದಲ್ಲಿ ದೂರು ನೀಡಿದ್ದ ಬಾಲಕಿಯ ತಾಯಿ ಮತ್ತು ಆ ಬಾಲಕಿ ಇಬ್ಬರೂ ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ದಾಖಲಿಸಿದ್ದಾರೆ. ಆದರೆ, ಬಾಲಕಿಯ ತಾಯಿ 2024ರ ಮೇ 26ರಂದು ನಿಧನರಾಗಿದ್ದಾರೆ.

ಈ ಮಧ್ಯೆ, 2025ರ ಫೆಬ್ರವರಿ 28 ರಂದು ಪ್ರಕರಣದ ವಿಚಾರಣೆ ನಡೆಸಿದ ತ್ವರಿತಗತಿಯ ವಿಶೇಷ ನ್ಯಾಯಾಲಯ, ಯಡಿಯೂರಪ್ಪಗೆ ಸಮನ್ಸ್ ಜಾರಿಗೊಳಿಸಿತ್ತು. ಇದನ್ನು ಪ್ರಶ್ನಿಸಿ, ಪ್ರಕರಣ ರದ್ದು ಕೋರಿ

ಯಡಿಯೂರಪ್ಪ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿ, ವಿಚಾರಣೆಗೆ ಅನುಮತಿ ಕೋರಿತ್ತು. ಇದನ್ನು ಪ್ರಶ್ನಿಸಿ, ಯಡಿಯೂರಪ್ಪನವರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.