ಶಾರ್ಜಾ(ಅ.04) ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಶಾರ್ಜಾದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 34 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ಪಡೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಸವಾಲಿನ ಗುರಿ ಬೆನ್ನತ್ತಿದ ಹೈದರಾಬಾದ್ ತಂಡ 7 ವಿಕೆಟ್ ಕಳೆದುಕೊಂಡು 174 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಮುಂಬೈ ಇಂಡಿಯನ್ಸ್ ನೀಡಿದ್ದ 209 ರನ್‌ಗಳ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಬೇರ್‌ಸ್ಟೋವ್ ಹಾಗೂ ವಾರ್ನರ್ ಜೋಡಿ 4.1 ಓವರ್‌ನಲ್ಲಿ 34 ರನ್‌ಗಳ ಜತೆಯಾಟವಾಡಿತು. ಬೇರ್‌ಸ್ಟೋವ್ 15 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 25 ರನ್ ಬಾರಿಸಿ ಟ್ರೆಂಟ್‌ ಬೌಲ್ಟ್‌ಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಮನೀಶ್ ಪಾಂಡೆ ಹಾಗೂ ಡೇವಿಡ್ ವಾರ್ನರ್ ಎರಡನೇ ವಿಕೆಟ್‌ಗೆ 60 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಸ್ಫೋಟಕ ಬ್ಯಾಟಿಂಗ್ ನಡೆಸಿದ  ಮನೀಶ್ ಪಾಂಡೆ ಕೇವಲ 19 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 30 ರನ್ ಬಾರಿಸಿ ಜೇಮ್ಸ್ ಪ್ಯಾಟಿನ್‌ಸನ್‌ಗೆ ವಿಕೆಟ್‌ ಒಪ್ಪಿಸಿದರು. ನಾಯಕ ಡೇವಿಡ್ ವಾರ್ನರ್ 44 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 60 ರನ್ ಬಾರಿಸಿ ಪ್ಯಾಟಿನ್‌ಸನ್‌ಗೆ ಎರಡನೇ ಬಲಿಯಾದರು.

RCB ವಿರುದ್ಧ ಸೋಲಿನ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ಗೆ ಸಿಕ್ತು ಗುಡ್‌ ನ್ಯೂಸ್..!

ಕೈಕೊಟ್ಟ ಮಧ್ಯಮ ಕ್ರಮಾಂಕ: ಸನ್‌ರೈಸರ್ಸ್ ಹೈದರಾಬಾದ್ ತಂಡದ ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಉತ್ತಮ ರನ್ ಬಾರಿಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕೇನ್ ವಿಲಿಯಮ್ಸನ್(3) ಹಾಗೂ ಕಳೆದ ಪಂದ್ಯದ ಹೀರೋ ಪ್ರಿಯಂ ಗರ್ಗ್(8) ಒಂದಂಕಿ ಮೊತ್ತ ದಾಖಲಿಸುವ ಮೂಲಕ ನಿರಾಸೆ ಅನುಭವಿಸಿದರು. ಕೊನೆಯಲ್ಲಿ ಅಭಿಷೇಕ್ ಶರ್ಮಾ ಹಾಗೂ ಅಬ್ದುಲ್ ಸಮದ್(20) ಕೊಂಚ ಹೋರಾಟ ನಡೆಸಿದರಾದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಮುಂಬೈ ಇಂಡಿಯನ್ಸ್ ಪರ ಟ್ರೆಂಟ್ ಬೌಲ್ಟ್, ಜೇಮ್ಸ್ ಪ್ಯಾಟಿನ್‌ಸನ್ ಹಾಗೂ ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದರೆ, ಕೃನಾಲ್ ಪಾಂಡ್ಯ ಒಂದು ವಿಕೆಟ್ ಉರುಳಿಸಿದರು.

ಇದಕ್ಕೂ ಮೊದಲು ಟಾಸ್ ಗೆದ್ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬ್ಯಾಟ್ ಬೀಸಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿಕಾಕ್(67), ಇಶಾನ್ ಕಿಶನ್(31) ಸೇರಿದಂತೆ ರೋಹಿತ್ ಹೊರತುಪಡಿಸಿ ಉಳಿದೆಲ್ಲಾ ಬ್ಯಾಟ್ಸ್‌ಮನ್‌ಗಳು ಎರಡಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾದರು. ಅದರಲ್ಲೂ ಕೊನೆಯ ಎಸೆತಗಳಲ್ಲಿ ಕೃನಾಲ್ ಪಾಂಡ್ಯ ಕೊನೆಯ 4 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಬಾರಿಸುವ ಮೂಲಕ ತಂಡದ ಮೊತ್ತವನ್ನು ಇನ್ನೂರರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.