Asianet Suvarna News Asianet Suvarna News

ಕನ್ನಡದಲ್ಲೂ ಬ್ಯಾಂಕಿಂಗ್‌ ಪರೀಕ್ಷೆ - ಸ್ಥಳೀಯರಿಗೆ ಅವಕಾಶ?

ಬ್ಯಾಂಕುಗಳಿಗೆ ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಭಾಷಾ ಜ್ಞಾನ ಹೊಂದಿರುವ ಸ್ಥಳೀಯರಿಗೆ ಅವಕಾಶ ಒದಗಿಸುವ ಸಂಬಂಧ ಬ್ಯಾಂಕಿಂಗ್‌ ಸಿಬ್ಬಂದಿ ನೇಮಕಾತಿ ಸಂಸ್ಥೆಯ (ಐಬಿಪಿಎಸ್‌) ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಸಿಎಂ ಕುಮಾರಸ್ವಾಮಿ,ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು. 

CM HD Kumaraswamy Meets Nirmala Sitharaman
Author
Bengaluru, First Published Jun 16, 2019, 8:53 AM IST

ಬೆಂಗಳೂರು (ಜೂ.16) :  ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಭಾಷಾ ಜ್ಞಾನ ಹೊಂದಿರುವ ಸ್ಥಳೀಯರಿಗೆ ಅವಕಾಶ ಒದಗಿಸುವ ಸಂಬಂಧ ಬ್ಯಾಂಕಿಂಗ್‌ ಸಿಬ್ಬಂದಿ ನೇಮಕಾತಿ ಸಂಸ್ಥೆಯ (ಐಬಿಪಿಎಸ್‌) ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಮಾಡಿದ್ದಾರೆ.

ಶನಿವಾರ ದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ನಂತರ ಕುಮಾರಸ್ವಾಮಿ ಅವರು ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ ಅವರೂ ಉಪಸ್ಥಿತರಿದ್ದರು.

ಬ್ಯಾಂಕಿಂಗ್‌ ಪ್ರವೇಶ ಪರೀಕ್ಷೆಗಳನ್ನು ಸಂವಿಧಾನ ಮಾನ್ಯತೆ ನೀಡಿರುವ ಎಲ್ಲ 22 ಭಾಷೆಗಳಲ್ಲಿ ನಡೆಸಬೇಕು ಹಾಗೂ ಕೇಂದ್ರ ಸರ್ಕಾರದ ಎಲ್ಲ ಇಲಾಖೆಗಳ ನೇಮಕಾತಿಯಲ್ಲೂ ಸ್ಥಳೀಯರಿಗೆ ಅವಕಾಶ ಒದಗಿಸುವ ಕುರಿತು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಮನವಿ ಮಾಡಲಾಗಿದೆ. ಹಿಂದಿನ ಕೇಂದ್ರ ಸರ್ಕಾರದ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಅರುಣ್‌ ಜೇಟ್ಲಿ ಅವರಿಗೂ ಈ ಬಗ್ಗೆ ಕುಮಾರಸ್ವಾಮಿ ಮನವಿ ಸಲ್ಲಿಸಿದ್ದರು.

ಇದಲ್ಲದೆ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್‌ ರಾಜ್‌ ಸಂಸ್ಥೆಗಳಿಗೆ 2018-19ನೇ ಸಾಲಿಗೆ ಬಾಕಿ ಇರುವ 233 ಕೋಟಿ ರು. ಪರ್ಫಾರ್ಮೆಸ್ಸ್‌ ಗ್ರಾಂಟ್ಸ್‌ ಬಿಡುಗಡೆ ಮಾಡುವಂತೆ ಕೋರಲಾಗಿದೆ. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸಂಸ್ಥೆಯಾಗಿದೆ. ಈ ಸಂಸ್ಥೆಯ ಬ್ಯಾಂಕ್‌ ಖಾತೆಯಲ್ಲಿರುವ ಮೊತ್ತ ಹಾಗೂ ಬಡ್ಡಿ ಮೊತ್ತವನ್ನು ಕಾರ್ಮಿಕರ ಕಲ್ಯಾಣಕ್ಕಾಗಿ ವಿನಿಯೋಗಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಕಾಯ್ದೆ 1961ರ ನಿಯಮ 10(29ಎ) ಅಡಿ ಮಂಡಳಿಯನ್ನು ಸೇರ್ಪಡೆಗೊಳಿಸಿ, ಕಾಫಿ ಮಂಡಳಿ, ರಬ್ಬರ್‌ ಮಂಡಳಿಗಳಂತೆ ಆದಾಯ ತೆರಿಗೆ ವಿನಾಯಿತಿ ನೀಡುವ ಮನವಿಯನ್ನೂ ಮುಖ್ಯಮಂತ್ರಿಗಳು ಕೇಂದ್ರ ಸಚಿವರಿಗೆ ಸಲ್ಲಿಸಿದರು.

ಅಲ್ಲದೆ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯವು ಅತ್ಯುತ್ತಮ ಸಾಧನೆ ಮಾಡಿದ್ದು, ಕೇಂದ್ರದಿಂದ ಕೂಲಿ ಮುಂಗಡವೂ ಸೇರಿದಂತೆ ಸುಮಾರು 1500 ಕೋಟಿ ರು. ಬಿಡುಗಡೆಯಾಗಬೇಕಿದೆ. ಈ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆಯೂ ಕೋರಿದರು.

Follow Us:
Download App:
  • android
  • ios