ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರೊಂದಿಗೆ, ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೂ ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ನಿಗದಿತ ದಿನಾಂಕದೊಳಗೆ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ತಾಲೂಕು ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 09 ಅಂಗನವಾಡಿ ಕಾರ್ಯಕರ್ತೆ ಮತ್ತು 84 ಸಹಾಯಕಿ ಹುದ್ದೆಗಳಿಗೆ ಗೌರವ ಸೇವೆಯ ಆಧಾರದ ಮೇಲೆ ಆಯ್ಕೆ ಮಾಡಲು ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಅರ್ಜಿ ಪಡೆದು ಜೂ. 30 ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 080-27625228 ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಎ.ಪಿ.ಎಂ.ಸಿ ಬಿಲ್ಡಿಂಗ್ ಒಳಾವರಣ, ದೊಡ್ಡಬಳ್ಳಾಪುರ ಇಲ್ಲಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಲು ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೇವನಹಳ್ಳಿಯಲ್ಲೂ ಹುದ್ದೆ

ಅದೇ ರೀತಿ ದೇವನಹಳ್ಳಿ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆ ಮತ್ತು 58 ಸಹಾಯಕಿ ಹುದ್ದೆಗಳಿಗೂ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಅರ್ಜಿ ಪಡೆದು ಜೂ. 30 ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಎರಡನೇ ಮಹಡಿ, ಅಕ್ಷಯ ಭವನ, ಪಿಎಲ್ ಡಿ ಬ್ಯಾಂಕ್ ಕಟ್ಟಡ ಆವರಣ, ದೇವನಹಳ್ಳಿ ಟೌನ್. ದೂ. ಸಂಖ್ಯೆ: 080-29565103 ಇಲ್ಲಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಅವಧಿ ವಿಸ್ತರಣೆ

ಕೃಷಿ ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅಭ್ಯರ್ಥಿಗಳು ಕೃಷಿ ಮತ್ತು ಸಂಬಂಧಿತ ವಲಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು. ಕನಿಷ್ಠ 01 ವರ್ಷ ಕೃಷಿ ಅಥವಾ ಕೃಷಿ ಸಂಬಂಧಿತ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು. ಆಸಕ್ತರು ಅಗತ್ಯ ದಾಖಲಾತಿಗಳು ಹಾಗೂ ತಮ್ಮ ಬಯೋಡೇಟಾದೊಂದಿಗೆ ಜೂ. 6 ರೊಳಗೆ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೊಠಡಿ ಸಂಖ್ಯೆ 208 /209, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಸಲ್ಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.