Asianet Suvarna News Asianet Suvarna News

ಸೋನಿಯಾ, ರಾಹುಲ್ ಜತೆ ಇಂದು ಕುಮಾರಸ್ವಾಮಿ ಸಭೆ

ದೆಹಲಿಗೆ ತೆರಳುವ ಕುಮಾರಸ್ವಾಮಿ ಕಾಂಗ್ರೆಸ್ ವರಿಷ್ಠರ ಜತೆ ಮಾತ್ರವಲ್ಲದೇ, ಚುನಾವಣಾ ಪೂರ್ವದಲ್ಲಿ ಮೈತ್ರಿ ಮಾಡಿಕೊಂಡಿರುವ ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ನಾಯಕಿ ಮಾಯಾವತಿ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಆಹ್ವಾನ ನೀಡುವ ಸಾಧ್ಯತೆಯಿದೆ. 

HD Kumaraswamy To Meet Rahul Gandhi And Sonia Gandhi In Delhi Today

ಬೆಂಗಳೂರು[ಮೇ.21]: ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚನೆಯ ಹೊಸ್ತಿಲಿನಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪಕ್ಷದ ಕೆಲ ನಾಯಕರ ಜತೆ ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಕಾಂಗ್ರೆಸ್‌ನ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕವಾಗಿ ಮೈತ್ರಿ ಕುರಿತು ಸಮಾಲೋಚನೆ ನಡೆಸಲಿದ್ದಾರೆ.
ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬಳಿ ಕುಮಾರಸ್ವಾಮಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸೀಟು ಹಂಚಿಕೆ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಎರಡು ಪಕ್ಷಗಳಿಗೆ ಎಷ್ಟು ಸಂಖ್ಯೆಯಲ್ಲಿ ಖಾತೆ ಹಂಚಿಕೆಯಾಗಬೇಕು ಮತ್ತು ಯಾವ ರೀತಿಯಲ್ಲಿ ಹಂಚಿಕೆ ಮಾಡಬೇಕು ಎಂಬುದರ ಕುರಿತು ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಸುದೀರ್ಘವಾಗಿ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.
ದೆಹಲಿಗೆ ಪ್ರಯಾಣಿಸುವ ಮುನ್ನ ಬೆಳಗ್ಗೆ 7.30ಕ್ಕೆ ಹೊಳೆನರಸಿಪುರಕ್ಕೆ ಅವರು ತೆರಳಲಿದ್ದಾರೆ. ಅಲ್ಲಿನ ಲಕ್ಷ್ಮಿ ನರಸಿಂಹ ದೇವಸ್ಥಾನ, ಹರದನಹಳ್ಳಿ ಶಿವ ದೇವಾಲಯ, ರಂಗನಾಥ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ. ದೇವರ ದರ್ಶನ ಬಳಿಕ ಬೆಂಗಳೂರಿಗೆ ಹಿಂತಿರುಗಿ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಬೆಳಗ್ಗೆ 11.30ಕ್ಕೆ ದೆಹಲಿಗೆ ಪ್ರಯಾಣಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ರಾಹುಲ್ ಗಾಂಧಿ ಮತ್ತು ಸಂಜೆ 4.30ಕ್ಕೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಪ್ರಮುಖ ಅಂಶಗಳನ್ನು ಒಗ್ಗೂಡಿಸಿ ಅವುಗಳನ್ನು ಅನುಷ್ಠಾನಗೊಳಿಸುವ ಚಿಂತನೆಯಲ್ಲಿ ಜೆಡಿಎಸ್ ನಾಯಕರಿದ್ದಾರೆ. ಈ ಸಂಬಂಧವೂ ಕಾಂಗ್ರೆಸ್ ವರಿಷ್ಠರ ಜತೆ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಸೇರಿ 14 ಸ್ಥಾನಗಳನ್ನು ಜೆಡಿಎಸ್‌ಗೆ ಮತ್ತು ಉಪ ಮುಖ್ಯಮಂತ್ರಿ ಸೇರಿ 20 ಸ್ಥಾನಗಳನ್ನು ಕಾಂಗ್ರೆಸ್‌ಗೆ ನೀಡಬಹುದು ಎಂಬ ಲೆಕ್ಕಾಚಾರದಲ್ಲಿ ಜೆಡಿಎಸ್ ಇದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜತೆ ನಡೆಯುವ ಸಭೆಯಲ್ಲಿ ಇದರ ಬಗ್ಗೆ ಪ್ರಸ್ತಾಪವಾಗಲಿದೆ ಎನ್ನಲಾಗಿದೆ.
ತೃತೀಯ ರಂಗದ ನಾಯಕರಿಗೂ ಆಹ್ವಾನ:
ದೆಹಲಿಗೆ ತೆರಳುವ ಕುಮಾರಸ್ವಾಮಿ ಕಾಂಗ್ರೆಸ್ ವರಿಷ್ಠರ ಜತೆ ಮಾತ್ರವಲ್ಲದೇ, ಚುನಾವಣಾ ಪೂರ್ವದಲ್ಲಿ ಮೈತ್ರಿ ಮಾಡಿಕೊಂಡಿರುವ ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ನಾಯಕಿ ಮಾಯಾವತಿ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಆಹ್ವಾನ ನೀಡುವ ಸಾಧ್ಯತೆಯಿದೆ.  ಅವರ ಪ್ರವಾಸ ಕಾರ್ಯಕ್ರಮ ಪಟ್ಟಿಯಲ್ಲಿ ಕಾಂಗ್ರೆಸ್ಸಿನ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಹೆಸರುಗಳು ಮಾತ್ರ ಇದ್ದರೂ ಸಮಯದ ಲಭ್ಯತೆ ಆಧಾರದ ಮೇಲೆ ಇತರ ನಾಯಕರನ್ನು ಭೇಟಿ ಮಾಡುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.

Follow Us:
Download App:
  • android
  • ios