ಬೆಂಗಳೂರು :  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ವಿಮಾನದಲ್ಲಿ ಭೇಟಿಯಾಗಿದ್ದಾರೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಕೋರಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಿತ್‌ ಶಾ ಮತ್ತು ಕುಮಾರಸ್ವಾಮಿ ಅವರು ವಿಮಾನದಲ್ಲಿ ಭೇಟಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲು ಹಿಂದೇಟು ಹಾಕಲು ಕಾರಣವೇನು? ಸುಳ್ಳು ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು ತಕ್ಷಣ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅಮಿತ್‌ ಶಾ ಅವರು ಕದ್ದು ಮುಚ್ಚಿ ಓಡಾಡಿಲ್ಲ. ಈ ಕುರಿತು ದಾಖಲೆ ಬಿಡುಗಡೆಗೆ ಚುನಾವಣೆಗಿಂತ ಒಳ್ಳೆಯ ಕಾಲ ಯಾವುದಿದೆ? ಗುಪ್ತಚರ ಇಲಾಖೆಯಲ್ಲಿ ಮುಖ್ಯಮಂತ್ರಿಗಳಿಗೆ ಬೇಕಾದವರೇ ಇದ್ದಾರೆ. ಅವರಿಂದ ಮಾಹಿತಿ ಪಡೆದುಕೊಳ್ಳಬೇಕು. ನಿಮ್ಮ ನಾಯಕರ ಹಾಗೆ ಅಮಿತ್‌ ಶಾ ಕಣ್ಣು ತಪ್ಪಿಸಿಕೊಂಡು ಓಡಾಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿವೃದ್ಧಿ ಬಗ್ಗೆ ಮಾತನಾಡುವ ಶಕ್ತಿ ಇಲ್ಲ. ಸಿದ್ದರಾಮಯ್ಯ ಜನರಿಗೆ ಮೋಸ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.