ಬೆಂಗಳೂರು : ಈ ಬಾರಿಯ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖ ಅಭ್ಯರ್ಥಿಗಳು ತಮ್ಮ ಮತದಿಂದಲೇ ವಂಚಿತರಾಗಿದ್ದಾರೆ! ಮೈಸೂರಿನ ಚಾಮುಂಡೇಶ್ವರಿ ಹಾಗೂ ಬಾಗಲಕೋಟೆಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿರುವ ಸಿದ್ದರಾಮಯ್ಯ ಹೆಸರು, ಅವರು ಈ ಹಿಂದೆ ಪ್ರತಿನಿಧಿಸುತ್ತಿದ್ದ ವರುಣಾದ ಸಿದ್ದರಾಮನ ಹುಂಡಿ ಮತದಾರರ ಪಟ್ಟಿಯಲ್ಲಿತ್ತು. ಈ ಕ್ಷೇತ್ರದಿಂದ ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಸ್ಪರ್ಧಿಸಿದ್ದರು. 

ಇನ್ನು ಜೆಡಿಎಸ್‌ನಿಂದ ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳಿಂದ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಸಿಎಂ  ಎಚ್.ಡಿ.ಕುಮಾರಸ್ವಾಮಿ ಅವರಿಗೆ ಎರಡೂ ಕ್ಷೇತ್ರದಲ್ಲಿ ತಮ್ಮದೇ ಮತದಿಂದ ವಂಚಿತರಾಗಿದ್ದಾರೆ. ಕುಮಾರಸ್ವಾಮಿ ಹೆಸರು ಬಿಡದಿ ಸಮೀಪದ ಕೇತುಗಾನಹಳ್ಳಿ ಗ್ರಾಮದ ಮತಗಟ್ಟೆಯಲ್ಲಿದೆ. ಈ ಗ್ರಾಮ ಮಾಗಡಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದೆ. 

ಪರಂಗೂ ಇಲ್ಲ ತಮ್ಮದೇ ಮತ: ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೊಲ್ಲಹಳ್ಳಿ ಸರ್ಕಾರಿ ಶಾಲೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಚಿತ್ರದುರ್ಗದ ಮೊಳಕಾಲ್ಮುರು ಹಾಗೂ ಬಾಗಲಕೋಟೆಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಸಂಸದ ಶ್ರೀರಾಮುಲು ಕೂಡ ತಮ್ಮ ಮತವನ್ನು ತಾವೇ ಹಾಕಿಕೊಳ್ಳುವುದು ಸಾಧ್ಯವಾಗಿಲ್ಲ. ಶ್ರೀರಾಮುಲು ಬಳ್ಳಾರಿಯಲ್ಲಿ ತಮ್ಮ ಮತ ಚಲಾಯಿಸಿದ್ದಾರೆ.