ಮಕ್ಕಳನ್ನು ದುಡಿಸಿಕೊಳ್ಳುವವರಿಗೆ 2 ವರ್ಷ ಜೈಲು
ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 2016ರಂತೆ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಗ್ಯಾರೇಜ್, ಹೋಟೆಲ್, ಕೃಷಿ ಮತ್ತು ಇನ್ನಿತರೆ ಅಪಾಯಕಾರಿ ಉದ್ಯಮಗಳಲ್ಲಿ ದುಡಿಸಿಕೊಳ್ಳುವ ಮಾಲೀಕರಿಗೆ 2 ವರ್ಷ ಜೈಲು ಶಿಕ್ಷೆಯೊಂದಿಗೆ 50 ಸಾವಿರ ರು.ಗಳ ದಂಡ ವಿಧಿಸಲಾಗುವುದೆಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ತಿಳಿಸಿದರು.
ತುಮಕೂರು : ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 2016ರಂತೆ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಗ್ಯಾರೇಜ್, ಹೋಟೆಲ್, ಕೃಷಿ ಮತ್ತು ಇನ್ನಿತರೆ ಅಪಾಯಕಾರಿ ಉದ್ಯಮಗಳಲ್ಲಿ ದುಡಿಸಿಕೊಳ್ಳುವ ಮಾಲೀಕರಿಗೆ 2 ವರ್ಷ ಜೈಲು ಶಿಕ್ಷೆಯೊಂದಿಗೆ 50 ಸಾವಿರ ರು.ಗಳ ದಂಡ ವಿಧಿಸಲಾಗುವುದೆಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲಕಾರ್ಮಿಕ ಕಾಯ್ದೆ 1986ರ ಸೆಕ್ಷನ್ 17 ರಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಿಂದ ನೇಮಕವಾದ ನಿರೀಕ್ಷಕರು ತಮ್ಮ ವ್ಯಾಪ್ತಿಯಲ್ಲಿರುವ ಅಂಗಡಿ ಮುಂಗಟ್ಟು, ಹೋಟೆಲ್, ಗ್ಯಾರೇಜ್‌ಗಳಲ್ಲಿ 18 ವರ್ಷದೊಳಗಿನ ಮಕ್ಕಳು ಕೆಲಸ ಮಾಡುತ್ತಿರುವ ಬಗ್ಗೆ ಮೊದಲ ಹಂತದಲ್ಲಿ ಪರಿಶೀಲನೆ ಮಾಡಬೇಕು. ಯಾವುದಾದರೂ ವಾಣಿಜ್ಯ ಸಂಸ್ಥೆಗಳಲ್ಲಿ ಮಕ್ಕಳು ಕೆಲಸ ಮಾಡುವುದು ಕಂಡು ಬಂದರೆ ಅದರ ಮಾಲೀಕರಿಗೆ ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಮತ್ತು ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕು. ಕಾಯ್ದೆಯ ಬಗ್ಗೆ ಅರಿವಿದ್ದರೂ ಸಹ ಬಾಲ ಕಾರ್ಮಿಕರಿಂದ ದುಡಿಸಿಕೊಳ್ಳುವುದು ಗಮನಕ್ಕೆ ಬಂದರೆ ದಾಳಿ ನಡೆಸಿ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕೆಂದು ಹೇಳಿದರು.
ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕರು ಪೊಲೀಸ್ ಠಾಣೆಗೆ ತಪ್ಪಿತಸ್ಥ ಮಾಲೀಕರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಬಂದಾಗ ವಿಳಂಬ ಮಾಡದೆ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕೆಂದು. ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಸೇರಿಸಿದರಿಂದಾಗುವ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಆಯೋಜಿಸಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ನೋಂದಣಿ ಮಾಡಿಕೊಂಡಿರುವ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್‌ಗಳನ್ನು ತಾಲೂಕುವಾರು ವಿತರಣೆ ಮಾಡಬೇಕು ಎಂದು ತುಮಕೂರು ವಿಭಾಗ ಮತ್ತು ಮಧುಗಿರಿ ಉಪವಿಭಾಗಗಳ ಕಾರ್ಮಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಸಂಗ್ರಹವಾಗಿರುವ ಕಾರ್ಪಸ್ ನಿಧಿ ಹಾಗೂ ಅದರಿಂದ ಬಂದಿರುವ ಬಡ್ಡಿ ಹಣವನ್ನು ಬಾಲಕಾರ್ಮಿಕ ಕುಟುಂಬಗಳ ಪುನರ್ವಸತಿ ಹಾಗೂ ಅವರ ಕಲ್ಯಾಣಕ್ಕಾಗಿ ಮಾತ್ರ ವಿನಿಯೋಗಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ತೇಜಾವತಿ, ಫೈರೋಜ್ ಪಾಷ, ಡಿ ಹೆಚ್ ಓ ಡಾ.ಮಂಜುನಾಥ್, ರೇಷ್ಮೆ ಇಲಾಖೆ ಉಪ ನಿರ್ದೇಶಕ ಬಾಲಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.--
ಅನಧಿಕೃತ ಕಾರ್ಖಾನೆಗಳ ವಿರುದ್ಧ ಕ್ರಮವಹಿಸಿ
ತಿಪಟೂರು ತಾಲೂಕಿನಲ್ಲಿ ಕೈಗಾರಿಕೆ ಇಲಾಖೆಯಿಂದ ಉದ್ದಿಮೆಗಳನ್ನು ಪ್ರಾರಂಭಿಸಲು ಅನುಮತಿ ಪಡೆಯದೆ ಕೆಲವು ಕೊಬ್ಬರಿ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿವೆ. ಅನಧಿಕೃತವಾಗಿ ನಡೆಸುತ್ತಿರುವ ಇಂತಹ ಕಾರ್ಖಾನೆಗಳಿಗೆ ನೋಟಿಸ್ ನೀಡಿ ವಿಚಾರಣೆಗೊಳಪಡಿಸಬೇಕು ಎಂದು ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು. ಕೊಬ್ಬರಿ ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಉತ್ತರ ಭಾರತದ ಕಾರ್ಮಿಕ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಸಂಜೆ ಶಾಲೆಗಳನ್ನು ಆರಂಭಿಸಲು ಕ್ರಮ ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.