4 ದಿನ ಕರಾವಳಿಯ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ
- ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ವ್ಯಾಪಕ ಮಳೆ
- ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಮಾತ್ರ ಮಳೆ
ಬೆಂಗಳೂರು (ಆ.09): ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರ ನೈಋುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಆದರೆ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಗೋಕರ್ಣದಲ್ಲಿ 18 ಸೆಂ.ಮೀ, ಆಗುಂಬೆ 8 ಸೆಂ.ಮೀ, ಹುಂಚದಕಟ್ಟೆ7 ಸೆಂ.ಮೀ, ಸುಬ್ರಹ್ಮಣ್ಯ, ವಿಟ್ಲ, ಧರ್ಮಸ್ಥಳದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್, ದಾವಣಗೆರೆ, ಬೆಂಗಳೂರು ಎಚ್‌ಎಎಲ್ ಮತ್ತು ಚಿಕ್ಕಮಗಳೂರಿನಲ್ಲಿ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ನಿರೀಕ್ಷೆಗಿಂತ ಅಧಿಕ ಮಳೆಯಾದರೂ ಬರದ ಛಾಯೆ..!
ಆಗಸ್ಟ್ 11ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದ ಒಂದೆರಡು ಕಡೆ ಗುಡುಗಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.