ಬೆಂಗಳೂರು(ಡಿ.19): ರಾಜರಾಜೇಶ್ವರಿ ನಗರ ಉಪನೋಂದಣಾಧಿಕಾರಿ ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ಮಧ್ಯವರ್ತಿಗಳಿಂದ 3.46 ಲಕ್ಷ ನಗದು ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರ್‌.ಆರ್‌.ನಗರ ಸಬ್‌ರಿಜಿಸ್ಟ್ರಾರ್‌ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಸ್ವಯಂ ದೂರು ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡಿದ್ದಾರೆ. ಶುಕ್ರವಾರ ಸಂಜೆ ಕಾರ್ಯಾಚರಣೆ ಕೈಗೊಂಡಿದ್ದು, ತಡರಾತ್ರಿಯವರೆಗೆ ನಡೆಯಿತು. ಐದು ತಂಡದಲ್ಲಿ 20ಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಎಸಿಬಿ ದಾಳಿ: ಭ್ರಷ್ಟ ಅಧಿಕಾರಿ ಮನೇಲಿ ಲಕ್ಷ ಲಕ್ಷ ಹಣ ಪತ್ತೆ..!

ಕಾರ್ಯಾಚರಣೆ ವೇಳೆ 3.46 ಲಕ್ಷ ನಗದು ಸೇರಿದಂತೆ ಇತರೆ ದಾಖಲೆಗಳನ್ನು ಮಧ್ಯವರ್ತಿಗಳಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ. ಕಚೇರಿಯ ಅಧಿಕಾರಿ, ಸಿಬ್ಬಂದಿ ಮತ್ತು ಮಧ್ಯವರ್ತಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸಬ್‌ರಿಜಿಸ್ಟ್ರಾರ್‌ ಕಚೇರಿಯ ಬಳಿ ಇರುವ ಅಂಗಡಿಗಳಲ್ಲಿಯೂ ಶೋಧ ನಡೆಸಲಾಗಿದೆ. ಅಲ್ಲಿ ಖಾಲಿ ಇರುವ ಸ್ಟ್ಯಾಂಪ್‌ ಪೇಪರ್‌ ಸೇರಿದಂತೆ ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿದಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.