ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ 50 ಬೆಡ್ ಹೆಚ್ಚಿಸಲು ಕ್ರಿಯಾಯೋಜನೆ: ಸಚಿವ ಗುಂಡೂರಾವ್
ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯಗಳಲ್ಲಿ ವೈದ್ಯರ ಕೊರತೆ ಮತ್ತು ಸಲಕರಣೆಗಳ ಕೊರತೆ ಇದ್ದು, ಇದನ್ನು ಪೂರೈಸಲು ಹಂತ ಹಂತವಾಗಿ ಯೋಜನೆ ರೂಪಿಸಲಾಗುತ್ತಿದೆ: ಸಚಿವ ದಿನೇಶ್ ಗುಂಡೂರಾವ್
ಪುತ್ತೂರು(ಆ.12): ಪುತ್ತೂರಿನ ಸರ್ಕಾರಿ ಆಸ್ಪತ್ರೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಾಗಿದ್ದು, ಈಗಾಗಲೇ 50 ಬೆಡ್ ಹೆಚ್ಚಿಸಿ ಮೇಲ್ದರ್ಜೆಗೇರಿಸಲು ಕ್ರಿಯಾಯೋಜನೆ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ವಿಶೇಷ ಆಧ್ಯತೆಯಲ್ಲಿ 125 ವರ್ಷಗಳ ಇತಿಹಾಸವಿರುವ ಈ ಆಸತ್ರೆಯ ಹಳೆಯ ಕಟ್ಟಡ ಉಳಿಸಿಕೊಂಡೇ ಹೊಸ ಕಟ್ಟಡ ನಿರ್ಮಾಣ ಮಾಡುವ ಮೂಲಕ 150 ಬೆಡ್ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪುತ್ತೂರಿಗೆ ಶುಕ್ರವಾರ ಆಗಮಿಸಿದ್ದ ಸಂದರ್ಭದಲ್ಲಿ ಪುತ್ತೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯಗಳಲ್ಲಿ ವೈದ್ಯರ ಕೊರತೆ ಮತ್ತು ಸಲಕರಣೆಗಳ ಕೊರತೆ ಇದ್ದು, ಇದನ್ನು ಪೂರೈಸಲು ಹಂತ ಹಂತವಾಗಿ ಯೋಜನೆ ರೂಪಿಸಲಾಗುತ್ತಿದೆ ಎಂದರು.
ಸ್ಮಾರ್ಟ್‌ಸಿಟಿ ಕಾಮಗಾರಿ ಡಿಸೆಂಬರ್ ಅಂತ್ಯದೊಳಗೆ ಪೂರ್ಣ: ಸಚಿವ ದಿನೇಶ್ ಗುಂಡೂರಾವ್
ಸರ್ಕಾರಿ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಸಿಬ್ಬಂದಿ ಕೊರತೆ ನಿವಾರಿಸಲು 500 ಮಂದಿ ನೇಮಕಾತಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಪೂರ್ಣಪ್ರಮಾಣದಲ್ಲಿ ವೈದ್ಯರನ್ನು ನೇಮಕಾತಿಗೊಳಿಸಲು ಕೌನ್ಸಿಲಿಂಗ್ ನಡೆಸಲಾಗುತ್ತಿದೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಎಲುಬು ಚಿಕಿತ್ಸೆಗೆ ಸಂಬಂಧಿಸಿದ ಶಸ್ತ್ರಚಿಕಿತ್ಸಾ ವ್ಯವಸ್ಥೆ ಶೀಘ್ರದಲ್ಲಿ ಮಾಡಲಾಗುವುದು ಎಂದು ತಿಳಿಸಿದರು.
ಶಾಸಕ ಅಶೋಕ್ ರೈ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ., ಮೈಸೂರು ವಿಭಾಗೀಯ ಆರೋಗ್ಯ ಇಲಾಖಾ ಅಧಿಕಾರಿ ಡಾ. ರಾಜೇಶ್ವರಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್, ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್, ತಹಸೀಲ್ದಾರ್ ಶಿವಶಂಕರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಬದ್ರುದ್ದೀನ್, ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಹಾಜರಿದ್ದರು.