ಎಲ್ಲ ಸರ್ಕಾರಿ ಆಸ್ಪತ್ರೆ ಒಂದೇ ಆಡಳಿತ ವ್ಯವಸ್ಥೆಗೆ?: ಸಿಎಂ ತೀರ್ಮಾನ ಬಾಕಿ
ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆಗಳನ್ನು ಒಂದೇ ಸೂರಿನಡಿ ತರುವ ಕುರಿತು ಎರಡೆರಡು ಆಯ್ಕೆ ಹೊಂದಿರುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.
ವಿಶ್ವನಾಥ ಮಲೇಬೆನ್ನೂರು
ಬೆಂಗಳೂರು (ಡಿ.12): ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆಗಳನ್ನು ಒಂದೇ ಸೂರಿನಡಿ ತರುವ ಕುರಿತು ಎರಡೆರಡು ಆಯ್ಕೆ ಹೊಂದಿರುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಬೆಂಗಳೂರಿನ ಕೆಲವು ಆಸ್ಪತ್ರೆಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ, ಮತ್ತೆ ಕೆಲವು ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ.
ಆ ಎಲ್ಲವನ್ನೂ ಒಂದೇ ಸೂರಿನಡಿ ತರುವುದರೊಂದಿಗೆ ವಿಶೇಷ ಹಾಗೂ ಪ್ರತ್ಯೇಕ ಇಲಾಖೆ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಗೆ ಸೂಚಿಸಿದ್ದರು. ಬಿಬಿಎಂಪಿಯ ಆರೋಗ್ಯ ವಿಭಾಗ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಸರಣಿ ಸಭೆಗಳನ್ನು ನಡೆಸಿ ಜಂಟಿಯಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಪ್ರಸ್ತಾವನೆಯು ಎರಡೆರಡು ಆಯ್ಕೆಗಳನ್ನು ಒಳಗೊಂಡಿದೆ.
ಮಧ್ಯಮ ಹಂತದ ಪೊಲೀಸರಿಗೆ ಎನ್‌ಡಿಎ ಮಾದರಿ ತರಬೇತಿ: ಸಿಎಂ ಬೊಮ್ಮಾಯಿ
1.ಬಿಬಿಎಂಪಿ ಅಥವಾ ಆರೋಗ್ಯ ಇಲಾಖೆ?: ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಹೆರಿಗೆ ಆಸ್ಪತ್ರೆ, ರೆಫರಲ್ ಆಸ್ಪತ್ರೆಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಒಂದೇ ಸೂರಿನಡಿ ತಂದ ಬಳಿಕ ಬಿಬಿಎಂಪಿ ಆರೋಗ್ಯ ವಿಭಾಗದಡಿ ಕಾರ್ಯ ನಿರ್ವಹಿಸಬೇಕಾ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸ ಬೇಕಾ ಎಂಬ ಆಯ್ಕೆ ನೀಡಲಾಗಿದೆ.
2.ನಗರಾಭಿವೃದ್ಧಿ ಇಲಾಖೆ ಅಥವಾ ಆರೋಗ್ಯ ಇಲಾಖೆ?: ಆಸ್ಪತ್ರೆಗಳ ಮೇಲ್ವಿಚಾರಣೆಯನ್ನು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಅಥವಾ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನಡೆಸಬೇಕಾ ಎಂಬ ಆಯ್ಕೆಯನ್ನು ಸರ್ಕಾರಕ್ಕೆ ನೀಡಿ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ.
ಎರಡು ಹೆಜ್ಜೆ ಬಾಕಿ: ಬೆಂಗಳೂರಿನ ಆರೋಗ್ಯ ವ್ಯವಸ್ಥೆಯನ್ನು ಒಂದೇ ಸೂರಿನಡಿ ತರುವ ಕುರಿತು ಅಂತಿಮ ತೀರ್ಮಾನಕ್ಕೆ ಕೇವಲ ಎರಡು ಹೆಜ್ಜೆ ಬಾಕಿ ಇದೆ. ಆರೋಗ್ಯ ಸಚಿವರ ನೇತೃತ್ವದಲ್ಲಿ ಇಲಾಖೆಯ ಉನ್ನತ ಮಟ್ಟದ ಸಭೆ, ಬಳಿಕ ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಬೇಕಿದೆ. ಈ ಸಭೆಗಳು ಮುಕ್ತಾಯದ ಬಳಿಕ ಅಂತಿಮ ತೀರ್ಮಾನ ಹೊರ ಬೀಳುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಉತ್ತಮ ಆರೋಗ್ಯ ಸೇವೆಯ ಉದ್ದೇಶ: ಬಿಬಿಎಂಪಿ ವ್ಯಾಪ್ತಿಗೆ 2006-07ರಲ್ಲಿ ಹೊಸದಾಗಿ ಸೇರ್ಪಡೆಗೊಂಡ 8 ನಗರ ಸ್ಥಳೀಯ ಸಂಸ್ಥೆ ಹಾಗೂ 110 ಹಳ್ಳಿಗಳಲ್ಲಿ ಆರೋಗ್ಯ ಇಲಾಖೆಯಡಿ ಸ್ಥಾಪಿಸಲಾದ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಇನ್ನು ನಗರದ ಕೇಂದ್ರ ಭಾಗದಲ್ಲಿ ಬಿಬಿಎಂಪಿ ರೆಫರಲ್ ಆಸ್ಪತ್ರೆ, ಹೆರಿಗೆ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ.
ಆನೆ ದಾಳಿಯಿಂದ ಹಾನಿ, ಪರಿಹಾರ ಮೊತ್ತ ಡಬಲ್: ಸಿಎಂ ಸಭೆ ತೀರ್ಮಾನ
ಹೀಗೆ ಎರಡು ಇಲಾಖೆಯಡಿ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಿಸುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನ ಸಾಧ್ಯವಾಗುತ್ತಿಲ್ಲ. ಸಾಕಷ್ಟುಆಡಳಿತಾತ್ಮಕ ಸಮಸ್ಯೆಗಳು ಎದುರಿಸಬೇಕಾಗುತ್ತಿದೆ. ಜತೆಗೆ, ಕೊರೊನಾ ಸಂದರ್ಭದಲ್ಲಿಯೂ ಸೋಂಕು ಪರೀಕ್ಷೆ, ಲಸಿಕೆ ಕಾರ್ಯಕ್ರಮ ಅನುಷ್ಠಾನಕ್ಕೆ ಸಾಕಷ್ಟುಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲ ಆರೋಗ್ಯ ಕೇಂದ್ರಗಳನ್ನು ಒಂದೇ ಸೂರಿನಡಿ ತರುವುದಕ್ಕೆ ಸರ್ಕಾರ ನಿರ್ಧರಿಸಿದೆ.