ಬೀದರ್: ಕಾರಂಜಾ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ, ಶಾಸಕ ಶೈಲೇಂದ್ರ ಬೆಲ್ದಾಳೆ
ರೈತ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಸೂಕ್ತ ಪರಿಹಾರ ನೀಡಿ ಸಮಸ್ಯೆ ಎದುರಿಸುತ್ತಿರುವ ಬೀದರ್ ಜಿಲ್ಲೆಯ ರೈತರ ಹಿತ ಕಾಪಾಡಬೇಕು ಮತ್ತು ಸಂತ್ರಸ್ತರ ಹೋರಾಟಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕಮಾರ್ ಅವರಿಗೆ ಮನವಿ ಮಾಡಿದ ಡಾ.ಶೈಲೇಂದ್ರ ಬೆಲ್ದಾಳೆ
ವರದಿ- ಲಿಂಗೇಶ್ ಮರಕಲೆ, ಏಷ್ಯಾನೆಟ್ ಸುವರ್ಣ ನ್ಯೂಸ್, ಬೀದರ್
ಬೀದರ್(ಡಿ.12): ಬೀದರ್ ಜಿಲ್ಲೆಯ ಜೀವನಾಡಿ ಕಾರಂಜಾ ಜಲಾಶಯದ ಹಿನ್ನೀರಿನಲ್ಲಿ ಭೂಮಿ ಕಳೆದುಕೊಂಡ ರೈತ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಒತ್ತಾಯಿಸಿದಾರೆ ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿಗಳು ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ನಡೆದ ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ಚರ್ಚಿಸಲು ಇಂದು(ಮಂಗಳವಾರ) ಕರೆದ ಸಭೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸಭೆಯಲ್ಲಿ ಸಂತ್ರಸ್ತರ ಸಮಸ್ಯೆ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುವ ರೈತ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಸೂಕ್ತ ಪರಿಹಾರ ನೀಡಿ ಸಮಸ್ಯೆ ಎದುರಿಸುತ್ತಿರುವ ಬೀದರ್ ಜಿಲ್ಲೆಯ ರೈತರ ಹಿತ ಕಾಪಾಡಬೇಕು ಮತ್ತು ಸಂತ್ರಸ್ತರ ಹೋರಾಟಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕಮಾರ್ ಅವರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಸಹಾನುಭೂತಿಯಿಂದ ಈ ಪ್ರಕರಣವನ್ನು ಪರಿಶೀಲಿಸುವ ಭರವಸೆ ನೀಡಿದರು.
ಸೈಕಲ್ ಏರಿ ಜಾಗೃತಿ ಮೂಡಿಸಿದ ಬೀದರ್ ಡಿಸಿ, ಎಸ್ಪಿ..!
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಈಶ್ವರ ಖಂಡ್ರೆ, ಪೌರಾಡಳಿತ ಸಚಿವರಾದ ರಹಿಂ ಖಾನ್, ಬಸವಕಲ್ಯಾಣ ಶಾಸಕರಾದ ಶರಣು ಸಲಗಾರ, ಹುಮನಾಬಾದ್ ಶಾಸಕರಾದ ಸಿದ್ದು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಅರವಿಂದ ಕುಮಾರ ಅರಳಿ, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ್ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಭೀಮರಾವ ಪಾಟೀಲ್ ಮತ್ತು ರಾಜ್ಯ ನೀರಾವರಿ ಇಲಾಖೆ ಅಧಿಕಾರಿಗಳು, ಕಾರಂಜಾ ಸಂತ್ರಸ್ತರ ಹೋರಾಟ ಸಮಿತಿ ರೈತ ಮುಖಂಡರು ಮತ್ತಿತರರು ಇದ್ದರು.