ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ರಸ್ತೆ ದಾಟುತ್ತಿದ್ದ ಏಳು ವರ್ಷದ ಬಾಲಕಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆಕೆ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹಾವೇರಿ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಏಳು ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ನಡೆದಿದೆ. ನಗರ ಹೊರವಲಯದ ಹಲಗೇರಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಸಿರಿ ಅಡಿವೆಪ್ಪನವರ್ (7) ಗಾಯಗೊಂಡ ಬಾಲಕಿಯಾಗಿದ್ದಾಳೆ. ಬಾಲಕಿ ರಸ್ತೆ ದಾಟಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲೇ ವೇಗವಾಗಿ ಬಂದ ಕಾರೊಂದು ಆಕೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ಸುಮಾರು 10 ಅಡಿ ದೂರಕ್ಕೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಆತಂಕದ ವಾತಾವರಣ ನಿರ್ಮಾಣವಾಯಿತು. ಈ ಭೀಕರ ಅಪಘಾತದ ದೃಶ್ಯಗಳು ಸಮೀಪದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ತಕ್ಷಣ ಆಸ್ಪತ್ರೆ ಸೇರಿಸಿದ ಸ್ಥಳೀಯರು

ಅಪಘಾತವನ್ನು ಕಂಡ ಸ್ಥಳೀಯರು ತಕ್ಷಣ ಸ್ಪಂದಿಸಿ ಗಾಯಗೊಂಡ ಬಾಲಕಿಯನ್ನು ರಾಣೇಬೆನ್ನೂರು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿ ಎಂದು ಮಾಹಿತಿ ಲಭ್ಯವಾಗಿದೆ. ಘಟನೆಗೆ ಕಾರಣವಾದ ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿರುವ ಸ್ಥಳೀಯರು, ಚಾಲಕನನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಘಟನೆ ರಾಣೇಬೆನ್ನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅತಿವೇಗದ ವಾಹನ ಚಾಲನೆ

ನಗರದಲ್ಲಿ ವಾಹನಗಳ ಅತಿವೇಗ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಯಿಂದ ಇಂತಹ ಅಪಘಾತಗಳು ಮರುಕಳಿಸುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.