ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ, ಜಿಲ್ಲಾಡಳಿತವು ಶ್ರೀರಾಮ ಸೇನೆ ಪ್ರಮೋದ್ ಮುತಾಲಿಕ್‌ಗೆ ಒಂದು ತಿಂಗಳ ಕಾಲ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಬಾಗಲಕೋಟೆ (ಫೆ.21): ಕಳೆದ 2 ದಿನಗಳ ಹಿಂದೆ ನಗರದಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ಸಂಭವಿಸಿದ ಕಲ್ಲು ತೂರಾಟ ಮತ್ತು ಸಂಘರ್ಷದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿದೆ.

ಒಂದು ತಿಂಗಳ ಕಾಲ 'ಬ್ಯಾನ್':

ಬಾಗಲಕೋಟೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸಂಗಪ್ಪ (ಬಾ.ಆ.ಸೇ) ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. "ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 (BNSS) ಸೆಕ್ಷನ್ 163" ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿರುವ ಜಿಲ್ಲಾಧಿಕಾರಿಗಳು, ಫೆಬ್ರವರಿ 21, 2026 ರಿಂದ ಮಾರ್ಚ್ 21, 2026 ರವರೆಗೆ ಅನ್ವಯವಾಗುವಂತೆ ಒಂದು ತಿಂಗಳ ಕಾಲ ಪ್ರಮೋದ ಮುತಾಲಿಕ್ ಅವರು ಜಿಲ್ಲೆಯ ಗಡಿ ಪ್ರವೇಶಿಸದಂತೆ ಪ್ರತಿಬಂಧಕಾಜ್ಞೆ ವಿಧಿಸಿದ್ದಾರೆ.

ನಿರ್ಬಂಧಕ್ಕೆ ಕಾರಣವೇನು?

ಕೆಲ ದಿನಗಳ ಹಿಂದೆ ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಅದು ಕಲ್ಲು ತೂರಾಟಕ್ಕೆ ತಿರುಗಿತ್ತು. ಈ ಘಟನೆಯಿಂದ ನಗರದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸಾರ್ವಜನಿಕ ಶಾಂತಿ ಕದಡುವ ಸಾಧ್ಯತೆಗಳಿವೆ ಎಂದು ಪೊಲೀಸ್ ಇಲಾಖೆ ವರದಿ ನೀಡಿದೆ. ಇಂತಹ ಸೂಕ್ಷ್ಮ ಸಮಯದಲ್ಲಿ ಪ್ರಮೋದ ಮುತಾಲಿಕ್ ಅವರಂತಹ ಪ್ರಖರ ಭಾಷಣಕಾರರು ಜಿಲ್ಲೆಗೆ ಭೇಟಿ ನೀಡಿದರೆ ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗಬಹುದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಡಿಸಿ ಆದೇಶದಲ್ಲಿ ಏನಿದೆ?

'ಸಾರ್ವಜನಿಕ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಶ್ರೀ ಪ್ರಮೋದ ಮುತಾಲಿಕ್, ಹಿಂದೂ ಜಾಗರಣ ವೇದಿಕೆ ದಕ್ಷಿಣ ಪ್ರಾಂತದ ಕಾರ್ಯಕಾರಿಣಿ ಸದಸ್ಯರು ಇವರನ್ನು ಜಿಲ್ಲೆಗೆ ಪ್ರವೇಶಿಸದಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿರ್ಬಂಧ ವಿಧಿಸಲಾಗಿದೆ' ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ. ಈ ಆದೇಶದ ಪ್ರತಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು, ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ಸೂಕ್ತ ಕ್ರಮಕ್ಕಾಗಿ ರವಾನಿಸಲಾಗಿದೆ.

ಜಿಲ್ಲೆಯಲ್ಲಿ ಹೈ ಅಲರ್ಟ್:

ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಹದ್ದಿನ ಕಣ್ಣಿಟ್ಟಿದೆ. ಪ್ರಮೋದ ಮುತಾಲಿಕ್ ಅವರಿಗೆ ವಿಧಿಸಲಾಗಿರುವ ಈ ನಿರ್ಬಂಧವು ಜಿಲ್ಲೆಯಲ್ಲಿ ಸಂಘರ್ಷದ ಕಿಡಿ ಹೆಚ್ಚಾಗದಂತೆ ತಡೆಯುವ ಪ್ರಯತ್ನವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸದ್ಯ ಬಾಗಲಕೋಟೆ ಜಿಲ್ಲೆಯ ಜನರು ಶಾಂತಿ ಕಾಪಾಡುವಂತೆ ಮತ್ತು ವದಂತಿಗಳಿಗೆ ಕಿವಿಗೊಡದಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.