ಹಾಸನ (ಜ.28):  ಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಟಿಕೆಟ್‌ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆಯೇ ಹೊರತು ಹೊಳೆನರಸೀಪುರ ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡುವುದಿಲ್ಲ ಎಂದು ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಬಾಗೂರು ಮಂಜೇಗೌಡರು ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡುವಂತೆ ಕಾಂಗ್ರೆಸ್‌ ನಾಯಕರು ಹೆಳಿದ್ದಾರೆ. ಟಿಕೆಟ್‌ ತಪ್ಪಿದರೂ ಬೇಸರವಿಲ್ಲ. ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಕೊಡದಿದ್ದರು ಚಿಂತೆಯಿಲ್ಲ. ಆದರೆ, ಹೊಳೆನರಸೀಪುರ ಕ್ಷೇತ್ರಕ್ಕೆ ಮಾತ್ರ ಹೋಗುವುದಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದ 418 ಹಳ್ಳಿ ಸುತ್ತಾಡಿದ್ದೇನೆ. ಅಲ್ಲಿನ ಜನರಿಗೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ನಾಯಕರು ಹೊಳೆನರಸೀಪುರ ಕ್ಷೇತ್ರಕ್ಕೆ ಬಂದು ಪಕ್ಷ ಸಂಘಟನೆ ಕಾರ್ಯಕ್ರಮ ನಡೆಸುತ್ತಾರೆ. ಮುಂದಿನ ದಿನಗಳಲ್ಲಿ ಯಾರು ಹೆದರಬಾರದು ಎಂದು ಧೈರ್ಯ ತುಂಬಿದರು.

'ಮುಂದಿನ ಚುನಾವಣೆಯಲ್ಲಿ ಎಚ್‌.ಡಿ ರೇವಣ್ಣ ಇಲ್ಲೇ ಸ್ಪರ್ಧಿಸಲಿ'

ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಪ್ರಭಲ ಪೈಪೋಟಿ ಜೆಡಿಎಸ್‌ ಪಕ್ಷವೇ ಹೊರತು ಬಿಜೆಪಿ ಅಲ್ಲವೇ ಅಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಕೈ ಜೋಡಿಸುವುದಿಲ್ಲ. ಈಗಾಗಲೇ ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಕಾಂಗ್ರೆಸ್‌ ಹಿರಿಯ ಮುಖಂಡರಾದ ಸಿದ್ದರಾಮಯ್ಯ ಇದನ್ನು ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿಯೂ ಕೂಡ ಏಕಾಂಗಿಯಾಗಿ ಸ್ಪ​ರ್ಧಿಸುತ್ತೇವೆ. ಕಾಂಗ್ರೆಸ್‌ ಗೆಲುವಿಗಾಗಿ ಎಲ್ಲರೂ ಶ್ರಮವಹಿಸುತ್ತೇವೆ. ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ ಎಂದರು.