ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ವ್ಯಕ್ತಿಗಳು ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ನಡೆದಿದೆ. ಮೈಸೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ಜಯಪುರ ಬ್ರಿಡ್ಜ್ ಬಳಿ ಹೆದ್ದಾರಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿ ಚೂರಾಗಿ ಹೋಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದರು. ಬಳಿಕ ಓರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಮೂಲದವರಾಗಿದ್ದು, ಮೃತರ ವಿವರಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಮುತ್ತುರಾಜು,(55) ತಮ್ಮನಗೌಡ(27) ಸಂಜು(28) ಚಾಲಕ ಸಚಿನ್(27) ಮೃತಪಟ್ಟವರೆಂದು ತಿಳಿದುಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರೂ ಕೂಡ ಸಾವನ್ನಪ್ಪಿದ್ದರು.
ಅಪಘಾತಕ್ಕೆ ಚಾಲಕ ನಿದ್ದೆ ಮಂಪರಿನಲ್ಲಿದ್ದಿದ್ದು ಕಾರಣವೆಂದು ಪೊಲೀಸರು ಶಂಕಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭೀಕರ ಅಪಘಾತದಿಂದ ಹೆದ್ದಾರಿಯಲ್ಲಿ ಕೆಲ ಕಾಲ ಪ್ರಯಾಣಕ್ಕೆ ವ್ಯತ್ಯಯ ಉಂಟಾಗಿದೆ.
