ಬೆಂಗಳೂರು[ಅ.06]: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವರಾಗಿ (ಆಡಳಿತ) ಕಾರ್ಯ ನಿರ್ವಹಿಸುತ್ತಿದ್ದ ಡಾ.ಆರ್‌. ಶ್ರೀನಿವಾಸ್‌ (59) ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಕೆಂಗೇರಿ ಬಳಿಯ ಬಂಟೇಮಠದ ರುದ್ರಭೂಮಿಯಲ್ಲಿ ಶನಿವಾರ ಸಂಜೆ ನೆರವೇರಿಸಲಾಯಿತು. ಮೃತರ ಕುಟುಂಬ ಸದಸ್ಯರು, ಬಂಧು ಮಿತ್ರರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಮೃತರು ಪತ್ನಿ ಹಾಗೂ ಒಬ್ಬ ಪುತ್ರನನ್ನು ಅಗಲಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಮೊದಲು ಬೆಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಮನ್ವಯಾಧಿಕಾರಿಯಾಗಿ ಸುಮಾರು ಮೂರು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದ ಅವರು ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದರು.

ಶ್ರೀನಿವಾಸ್‌ ಅವರ ನಿಧನಕ್ಕೆ ಬೆಂ.ಉತ್ತರ ವಿವಿ ಕುಲಪತಿ ಡಾ.ಟಿ.ಡಿ.ಕೆಂಪರಾಜು, ಮೌಲ್ಯಮಾಪನ ಕುಲಸಚಿವ ಡಾ.ಕೆ.ಜನಾರ್ಧನಂ, ಬೆಂಗಳೂರು ವಿವಿ ಕುಲಪತಿ ಡಾ.ಕೆ.ಆರ್‌.ವೇಣುಗೋಪಾಲ್‌ ಹಾಗೂ ಉಭಯ ವಿವಿಗಳ ಸಿಂಡಿಕೇಟ್‌ ಸದಸ್ಯರು, ಆಡಳಿತ ವರ್ಗ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.