ಪಿಒಪಿ ಗಣೇಶ ತಯಾರಿಸುವವರ ವಿರುದ್ಧ ಬಿಬಿಎಂಪಿ ಕ್ರಿಮಿನಲ್ ಕೇಸ್!
ಬೆಂಗಳೂರಿನಲ್ಲಿ ಪರಿಸರಕ್ಕೆ ಹಾನಿಕರ ವಸ್ತುಗಳಿಂದ ಗಣೇಶ ಮೂರ್ತಿ ತಯಾರಿಸುವವರ ವಿರುದ್ಧ ಬಿಬಿಎಂಪಿ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ ನೀಡಿದೆ. ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಲು ಸೂಚಿಸಲಾಗಿದೆ.
ಬೆಂಗಳೂರು (ಸೆ.1): ರಾಜಧಾನಿ ಬೆಂಗಳೂರಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ), ರಾಸಾಯನಿಕ ಹಾಗೂ ಥರ್ಮಾಕೋಲ್ ಸೇರಿದಂತೆ ಪರಿಸರಕ್ಕೆ ಹಾನಿ ಉಂಟು ಮಾಡುವ ವಸ್ತುಗಳಿಂದ ಗಣೇಶ ವಿಗ್ರಹ ತಯಾರಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 2015ರಲ್ಲಿಯೇ ಪರಿಸರಕ್ಕೆ ಹಾನಿ ಉಂಟು ಮಾಡುವ ವಸ್ತುಗಳಿಂದ ಗಣೇಶ ವಿಗ್ರಹ ತಯಾರಿಸುವುದನ್ನು ನಿಷೇಧಿಸಲಾಗಿದೆ. ಜತೆಗೆ ಪರಿಸರಕ್ಕೆ ಹಾನಿ ಮಾಡುವ ವಸ್ತುಗಳಿಂದ ಗಣೇಶ ಮೂರ್ತಿ ತಯಾರಿಸಿದರೆ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಕೌನ್ಸಿಲ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹಾಗಾಗಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಿ ಪೂಜಿಸಬೇಕೆಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.
ವಿರಾಟ್-ಅನುಷ್ಕಾ, ರಣವೀರ್-ದೀಪಿಕಾ, ಸೆಲೆಬ್ರಿಟಿಗಳು ವಿದೇಶದಲ್ಲಿ ಜನ್ಮ ನೀಡಲು ಬಯಸೋದ್ಯಾಕೆ, ಸೌಲಭ್ಯಗಳೇನು?
ಇದೇ ವೇಳೆ ಗಣೇಶ ಹಬ್ಬದ ಆಚರಣೆ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆದೇಶದಲ್ಲಿ ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯ 63 ಉಪ ಕಂದಾಯ ವಿಭಾಗದಲ್ಲಿ ಸ್ಥಾಪಿಸಲಾಗಿರುವ ಏಕಗವಾಕ್ಷಿ ಕೇಂದ್ರದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅರ್ಜಿಗಳನ್ನು ಸ್ವೀಕರಿಸಬೇಕು. ಪೊಲೀಸ್, ಬಿಬಿಎಂಪಿ, ಬೆಸ್ಕಾಂ, ಅಗ್ನಿ ಶಾಮಕ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಅಭಿಪ್ರಾಯ ಪಡೆದು ತ್ವರಿತವಾಗಿ ಅನುಮತಿ ನೀಡಬೇಕು. ಪರಿಸರಕ್ಕೆ ಹಾನಿ ಉಂಟು ಮಾಡುವ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಕಂಡು ಬಂದರೆ ಉಪ ವಿಭಾಗದ ಮಟ್ಟದಲ್ಲಿ ನೇಮಕ ಮಾಡಲಾದ ಬಿಬಿಎಂಪಿ, ಪೊಲೀಸ್, ಅಗ್ನಿ ಶಾಮಕ ಇಲಾಖೆ ಹಾಗೂ ಬೆಸ್ಕಾಂನ ನೋಡಲ್ ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಿ ವಶಕ್ಕೆ ಪಡೆದು ದಂಡ ವಿಧಿಸುವುದರೊಂದಿಗೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ವಲಯ ಆಯುಕ್ತರು ಮೇಲ್ವಾರಣೆ ನಡೆಸಬೇಕು ಎಂದು ಸೂಚಿಸಲಾಗಿದೆ.
ನಾಳೆ ತೆಲುಗು ಬಿಗ್‌ಬಾಸ್ ಸೀಸನ್ 8, ಇಂದು ಸ್ಪರ್ಧಿಗಳ ಪಟ್ಟಿ ಲೀಕ್, ಕನ್ನಡದವರಿಗೂ ಚಾನ್ಸ್!
ವಶಕ್ಕೆ ಪಡೆದ ವಸ್ತುಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕು. ಪರಿಸರ ಸ್ನೇಹಿ ಗಣೇಶ ಮೂರ್ತಿ ಪೂಜಿಸಲು ಮತ್ತು ತಯಾರಿಸುವ ಕುರಿತು ಜಾಗೃತಿ ಮೂಡಿಸಬೇಕು. ಗಣೇಶ ಮೂರ್ತಿಗಳ ವಿಸರ್ಜನೆಗೆ ಕುರಿತು ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಬೇಕು. ಗಣೇಶ ಮೂರ್ತಿ ವಿಸರ್ಜನೆ ಸ್ಥಳದಲ್ಲಿ ಅಗತ್ಯ ಸಿದ್ಧತೆ ಮಾಡಬೇಕು. ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ವಲಯಕ್ಕೆ ಒಬ್ಬರಂತೆ ನೋಡಲ್ ಅಧಿಕಾರಿ ನೇಮಕ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.