ಬೆಂಗಳೂರು(ಫೆ.22): ನಗರದಲ್ಲಿ ಕೋವಿಡ್‌ ಸೋಂಕು, ಮರಣ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸಿ, ಸೋಂಕು ತಡೆಯಲು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುವಂತೆ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಅವರು ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಭಾನುವಾರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್‌-19ಕ್ಕೆ ಸಂಬಂಧಿಸಿದಂತೆ ಎಲ್ಲಾ ವಲಯಗಳ ಜಂಟಿ ಆಯುಕ್ತರು, ಆರೋಗ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಪಂಜಾಬ್‌, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲೂ ಸೋಂಕು ಹೆಚ್ಚುತ್ತಿದೆ. ಇದು ಆತಂಕಕ್ಕೆ ಕಾರಣವಾಗಿದ್ದು ಬೆಂಗಳೂರು ನಗರದಲ್ಲಿ ಕೋವಿಡ್‌ ಸೋಂಕು ಹರಡದಂತೆ ಆರೋಗ್ಯ ಸಿಬ್ಬಂದಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್‌ ಪರೀಕ್ಷೆಗಾಗಿ 500 ತಂಡಗಳಿದ್ದು, ಈ ತಂಡಗಳನ್ನು ಸಮರ್ಪಕವಾಗಿ ಬಳಸಿಕೊಂಡು ತ್ವರಿತವಾಗಿ ಕೋವಿಡ್‌ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆಗೆ ಆರೋಗ್ಯ ಅಧಿಕಾರಿಗಳೊಂದಿಗೆ ಕಂದಾಯ ಅಧಿಕಾರಿಗಳು, ಎಂಜಿನಿಯರ್‌ಗಳನ್ನು ಬಳಸಿಕೊಳ್ಳಬೇಕು. ಮುಖ್ಯವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲೇ ಕೋವಿಡ್‌ ಪ್ರಕರಣ ನಿಯಂತ್ರಿಸಲು ಕ್ರಮವಹಿಸಬೇಕು ಎಂದು ಸೂಚಿಸಿದರು.

ಗಡಿ ಜಿಲ್ಲೆಗಳಲ್ಲಿ ಕೋವಿಡ್‌ ತಪಾಸಣೆಗೆ ಡಿಸಿಎಂ ಕಾರಜೋಳ ಸೂಚನೆ

ಕೋವಿಡ್‌ ಪ್ರಕರಣ ಕಂಡುಬಂದಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಕೋವಿಡ್‌ ಪರೀಕ್ಷೆಗೊಳಪಡಿಸಬೇಕು. ಐಎಲ್‌ಐ, ಸಾರಿ(ಸೀವಿಯರ್‌ ಅಕ್ಯೂಟ್‌ ರೆಸ್ಪಿರೇಟರಿ ಇಲ್‌ನೆಸ್‌) ಪ್ರಕರಣಗಳನ್ನು ಗುರುತಿಸಿ ಕೋವಿಡ್‌ ಪರೀಕ್ಷೆ ಮಾಡಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕೋವಿಡ್‌ ಪತ್ತೆಯಾದ ಪ್ರಕರಣಗಳ ಸಂಖ್ಯೆಯ ವರದಿಯನ್ನು ಪ್ರತಿನಿತ್ಯ ಸಲ್ಲಿಸಬೇಕು. ಒಂದು ವೇಳೆ ಪ್ರಕರಣಗಳು ಪತ್ತೆಯಾಗದಿದ್ದರೆ ಶೂನ್ಯ ವರದಿ ನೀಡಬೇಕು. ಕೊರೋನಾ ಸೋಂಕಿನಿಂದ ಯಾರಾದರು ಮೃತಪಟ್ಟರೆ ಆ ಬಗ್ಗೆಯೂ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ವಿಶೇಷ ಆಯುಕ್ತರುಗಳಾದ ರಾಜೇಂದ್ರ ಚೋಳನ್‌, ತುಳಸಿ ಮದ್ದಿನೇನಿ, ಡಿ.ರಂದೀಪ್‌, ರವೀಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಿಯಮ ಪಾಲನೆ ಕಡ್ಡಾಯ

ಸಾಮಾಜಿಕ ಸಭೆ, ಸಮಾರಂಭ, ಮದುವೆ ಸೇರಿದಂತೆ ಹೆಚ್ಚು ಜನರು ಸೇರುವ ಇತರೆ ಕಾರ್ಯಕ್ರಮಗಳಲ್ಲಿ ಕೋವಿಡ್‌ ಪ್ರಕರಣ ಕಂಡು ಬಂದರೆ ಅಪಾಯ ಹೆಚ್ಚು. ಆದ್ದರಿಂದ ಇಂತಹ ಜಾಗಗಳಲ್ಲಿ ಕೋವಿಡ್‌ ನಿಯಮ ಪಾಲನೆ ಕುರಿತು ಬಿತ್ತಿಪತ್ರ ಅಂಟಿಸಿ ಜಾಗೃತಿ ಮೂಡಿಸಬೇಕು. ಸಮಾರಂಭ ನಡೆಯುವ ಸ್ಥಳಗಳಿಗೆ ಮಾರ್ಷಲ್‌ಗಳನ್ನು ಕಳುಹಿಸಿ ಕೋವಿಡ್‌ ನಿಯಮ ಪಾಲನೆ ಮಾಡುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ಅದಕ್ಕೂ ಮುನ್ನ ಕಲ್ಯಾಣ ಮಂಟಪ ಸಂಘಗಳೊಂದಿಗೆ ಸಭೆ ನಡೆಸಿ ಕೋವಿಡ್‌ ನಿಯಮಗಳನ್ನು ತಪ್ಪದೆ ಪಾಲನೆ ಮಾಡುವ ಕುರಿತು ಸೂಚನೆ ನೀಡಬೇಕೆಂದು ಬಿಬಿಎಂಪಿ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌: ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ

ಶಾಲಾ-ಕಾಲೇಜುಗಳಲ್ಲಿ ಕಟ್ಟೆಚ್ಚರಕ್ಕೆ ನಿರ್ದೇಶನ

ನಗರದಲ್ಲಿ ಈಗಾಗಲೇ ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದು, ಪಾಲಿಕೆ ಆರೋಗ್ಯ ಸಿಬ್ಬಂದಿಯ ತನಿಖಾ ತಂಡವು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಕೋವಿಡ್‌ ಪ್ರಕರಣಗಳು ಕಂಡು ಬಂದಿವೆಯೇ? ಕೋವಿಡ್‌ ನಿಯಮ ಪಾಲನೆ ಸರಿಯಾಗಿದೆಯೇ ಎಂಬುದರ ಬಗ್ಗೆ ವಿಚಾರಣೆ ಮಾಡಬೇಕು ಎಂದು ಎನ್‌.ಮಂಜುನಾಥ್‌ ಪ್ರಸಾದ್‌ ಸೂಚಿಸಿದರು.

ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ತರಗತಿಗಳಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಮತ್ತು ಸಿಬ್ಬಂದಿಯ ಪಟ್ಟಿತಯಾರಿಸಿ ತನಿಖಾ ತಂಡಕ್ಕೆ ಕೊಡಬೇಕು. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಲ್ಲಿ ಸೋಂಕು ಲಕ್ಷಣ ಕಂಡು ಬಂದರೆ ತನಿಖಾ ತಂಡಕ್ಕೆ ಮಾಹಿತಿ ಒದಗಿಸಬೇಕು ಎನ್ನುವ ಕುರಿತು ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗೆ ಮಾಹಿತಿ ನೀಡಬೇಕು. ಶಾಲಾ-ಕಾಲೇಜುಗಳಲ್ಲಿ ಕೋವಿಡ್‌ ನಿಯಮಗಳ ಪಾಲನೆ ಕಡ್ಡಾಯವಾಗಿದ್ದು ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಸೂಚನೆ ನೀಡಿದರು.