ಬೆಂಗಳೂರು (ಸೆ.22): ಈಗಾಗಲೇ ಸೆ.27 ಕ್ಕೆ ನಿಗದಿಯಾಗಿರುವ ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಮುಂದೂಡುವ ಕುರಿತು ರಾಜ್ಯ ಮುಖ್ಯಚುನಾವಣಾಧಿಕಾರಿಗಳಿಂದ ಸೂಕ್ತ ನಿರ್ದೇಶನ ಪಡೆದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಬಿ.ಎಚ್. ಅನಿಲ್ ಕುಮಾರ್ ಸ್ಪಷ್ಟಪಡಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಆಗಿರುವುದರಿಂದ ಸೆ. 27ಕ್ಕೆ ನಡೆಯಲಿರುವ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಗರದ ಮತದಾರರ ಮೇಲೆ ಪ್ರಭಾವ ಬೀರಲಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
 
ಹೀಗಾಗಿ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಮುಂದೂಡುವಂತೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ರಾಜ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದು ಅವರಿಂದ ಸೂಕ್ತ ನಿರ್ದೇಶನ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಾಲಿಕೆ ವಿಪಕ್ಷ ನಾಯಕ ಪದ್ಮನಾಭ ರೆಡ್ಡಿ, ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೂ ಬಿಬಿಎಂಪಿ ಮೇಯರ್ ಚುನಾವಣೆಗೂ ಸಂಬಂಧವೇ ಇಲ್ಲ. ಮೇಯರ್ ಚುನಾವಣೆ ನಡೆದರೆ ಉಪ ಚುನಾವಣೆ ಮೇಲೆ ಹೇಗೆ ಬೀರುತ್ತದೆ ಎಂದು ಪ್ರಶ್ನೆ ಮಾಡಿರುವ ಅವರು, ಆಡಳಿತ ಪಕ್ಷದ ನಾಯಕರ ವಾದದಲ್ಲಿ ಅರ್ಥವಿಲ್ಲ ಎಂದಿದ್ದಾರೆ.

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, ಅ.24ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.