ಬೆಳಗಾವಿ [ಆ.26]:  ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಅತ್ಯಂತ ಕೆಟ್ಟಪರಿಸ್ಥಿತಿ ಕಂಡುಬಂದಿದೆ. ಕಬ್ಬಿನ ಬೆಳೆ ಭಾರೀ ಪ್ರಮಾಣದಲ್ಲಿ ಹಾನಿಯಾಗಿದ್ದು, ಸುಧಾರಣೆಗೆ ಸಾಕಷ್ಟು ಸಮಯ ಬೇಕು ಎಂದು ಕೇಂದ್ರ ಸರ್ಕಾರದ ನೆರೆಹಾನಿ ಅಧ್ಯಯನ ತಂಡದ ನೇತೃತ್ವ ವಹಿಸಿದ್ದ ಕೇಂದ್ರ ಗೃಹ ವ್ಯವಹಾರಗಳ ಇಲಾಖೆಯ ಆಡಳಿತ ವಿಭಾಗದ ಜಂಟಿ ನಿರ್ದೇಶಕ ಶ್ರೀ ಪ್ರಕಾಶ್‌ ತಿಳಿಸಿದ್ದಾರೆ.

ಜಿಲ್ಲೆಯ 5 ತಾಲೂಕುಗಳಲ್ಲಿ ಮಳೆ ಮತ್ತು ನೆರೆ ಹಾನಿ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಸಂತ್ರಸ್ತರಿಗೆ ಆದಷ್ಟುಶೀಘ್ರವೇ ಪರಿಹಾರ ಬಿಡುಗಡೆ ಮಾಡುವುದು ನಮ್ಮ ಆದ್ಯತೆ ಎಂದು ತಿಳಿಸಿದರು. ಪ್ರವಾಹ ಮತ್ತು ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ರಾಜ್ಯ ಸರ್ಕಾರ ಸೋಮವಾರವೇ ಪರಿಹಾರ ಪ್ರಸ್ತಾವ(ಮನವಿ) ಸಲ್ಲಿಸಲಿದ್ದು, ಅದನ್ನು ಆಧರಿಸಿ ಮತ್ತೊಮ್ಮೆ ಕೇಂದ್ರ ತಂಡವು ಪರಿಶೀಲನೆ ಕೈಗೊಳ್ಳಲಿದೆ ಎಂದರು. ಇದೇ ವೇಳೆ ಜಿಲ್ಲಾಡಳಿತದ ಕಾರ್ಯವೈಖರಿಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದಕ್ಕೂ ಮುಂಚೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಪ್ರವಾಹದಿಂದ ಜಿಲ್ಲೆಯಲ್ಲಿ ಉಂಟಾಗಿರುವ ಹಾನಿಯ ಕುರಿತು ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ಮಾಹಿತಿ ನೀಡಿದರು. ರಕ್ಷಣಾ ಕಾರ್ಯ, ಮನೆಗಳ ಕುಸಿತ, ರಸ್ತೆ​, ಸೇತುವೆ, ಶಾಲೆಗಳು ಸೇರಿದಂತೆ ಮೂಲ ಸೌಕರ್ಯಗಳ ಹಾನಿಯನ್ನು ಛಾಯಾಚಿತ್ರಗಳ ಪ್ರದರ್ಶನದ ಮೂಲಕ ಕೇಂದ್ರ ಅಧ್ಯಯನ ತಂಡಕ್ಕೆ ಮನವರಿಕೆ ಮಾಡಿಕೊಡಲಾಯಿತು.

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಳೆ ಮತ್ತು ಭೀಕರ ಪ್ರವಾಹದಿಂದ ರಾಜ್ಯದಲ್ಲಿ ಆಗಿರುವ ಹಾನಿ ಪರಿಶೀಲನೆ ನಡೆಸಲು ಆಗಮಿಸಿರುವ ಕೇಂದ್ರ ಅಧಿಕಾರಿಗಳ ತಂಡ ಭಾನುವಾರದಂದು ಬೆಳಗಾವಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಲ್ಲಿ ಸಂಚರಿಸಿ ಮಾಹಿತಿ ಪಡೆಯಿತು. ಕೇಂದ್ರ ಗೃಹ ವ್ಯವಹಾರಗಳ ಇಲಾಖೆಯ ಆಡಳಿತ ವಿಭಾಗದ ಜಂಟಿ ನಿರ್ದೇಶಕ ಶ್ರೀಪ್ರಕಾಶ್‌ ನೇತೃತ್ವದಲ್ಲಿ ಆಗಮಿಸಿದ್ದ ಏಳು ಅಧಿಕಾರಿಗಳ ತಂಡ ಮೊದಲ ದಿನವೇ ಚಿಕ್ಕೋಡಿ, ಕಾಗವಾಡ, ರಾಯಬಾಗ, ಗೋಕಾಕ ಮತ್ತು ರಾಮದುರ್ಗ ತಾಲೂಕಿನಲ್ಲಿ ಉಂಟಾಗಿರುವ ಹಾನಿಯ ಕುರಿತು ಅಧ್ಯಯನ ನಡೆಸಿತು. ಸೋಮವಾರದಂದು ಈ ತಂಡ ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಲ್ಲಿ ನೆರೆ ಹಾನಿ ಅಧ್ಯಯನ ಮುಂದುವರಿಸಲಿದೆ.