* ಬೆಳಗಾವಿಯಲ್ಲಿ ಮಿತಿಮೀರಿದ ಎಂಇಎಸ್ ಪುಂಡರ ಅಟ್ಟಹಾಸ  * ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಭಗ್ನ* 27 ಜನರನ್ನು ಅರೆಸ್ಟ್ ಮಾಡಿದ ಪೊಲೀಸ್ರು

ಬೆಳಗಾವಿ, (ಡಿ.18): ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು(Sangolli Rayanna Statue) ಭಗ್ನಗೊಳಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 27 ಮಂದಿಯನ್ನು ಬಂಧಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳಗಾವಿಯ(Belagavi) ಮೂರು ವಿವಿಧ ಪೊಲೀಸ್ ಠಾಣೆಗಳಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಘಟನೆಗೆ ಸಂಬಂಧಿಸಿ 27 ಮಂದಿಯನ್ನು ಬಂಧಿಸಲಾಗಿದೆ. ಸರ್ಕಾರದ ಮತ್ತು ಬೆಳಗಾವಿಯ ಪೊಲೀಸ್(Belagavi Police) ಇಲಾಖೆಗೆ ಸಂಬಂಧಪಟ್ಟ ಸುಮಾರು 26 ವಾಹನಗಳನ್ನು ಪುಂಡರು ಧ್ವಂಸಗೊಳಿಸಿದ್ದರು ಎಂದು ಬೆಳಗಾವಿ ಪೊಲೀಸ್ ಆಯುಕ್ತ ಡಾ ಕೆ ತ್ಯಾಗರಾಜನ್ ತಿಳಿಸಿದ್ದಾರೆ.

Belagavi: ಎಂಇಎಸ್, ಶಿವಸೇನೆ ಪುಂಡರ ಬೆಂಬಲಕ್ಕೆ ನಿಂತ ಬಿಜೆಪಿ ನಾಯಕ

ಎಂಇಎಸ್(MES) ಪುಂಡರ ಅಟ್ಟಹಾಸ ಮಿತಿಮೀರಿದ ಹಿನ್ನೆಲೆಯಲ್ಲಿ ನಗರದ ಮೂರು ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ, ಖಡೇಬಜಾರ್ ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಠಾಣೆಯಲ್ಲಿ ಮೂರು ಪ್ರತ್ಯೇಕ ದೂರುಗಳು ದಾಖಲಾಗಿವೆ. 

ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕಾನೂನು ಸುವ್ಯವಸ್ಥೆ ಹಾಳು ಮಾಡುವುದು, ಭಾಷಾ ವೈಷಮ್ಯ ಮೂಡಿಸುವುದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ನೂರಾರು ಎಂಇಎಸ್ ಪುಂಡರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿರುವುದರಿಂದ ಇಂದು(ಡಿ.18) ಬೆಳಗ್ಗೆ 8 ಗಂಟೆಯಿಂದ ನಾಳೆ(ಡಿ.19) ಬೆಳಗ್ಗೆ 6 ಗಂಟೆಯವರೆಗೂ ಬೆಳಗಾವಿ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಸಹ ಆಯುಕ್ತರು ತಿಳಿಸಿದ್ದಾರೆ.

ಏನಿದು ಘಟನೆ: 
ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಇಂದು ನಸುಕಿನ ಜಾವ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿ ವಿರೂಪಗೊಳಿಸಿರುವ ಘಟನೆ ನಡೆದಿದೆ. ಜನಸಂಚಾರವಿರದ ಹೊತ್ತಿನಲ್ಲಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ವಿರೂಪಗೊಳಿಸಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಂಗೊಳ್ಳಿ ರಾಯಣ್ಣ ಪುತ್ಥಳಿ ಹಾನಿಗೊಳಿಸಿ ಖಡ್ಗ, ಗುರಾಣಿ ಬೇರೆ ಬೇರೆ ಕಡೆ ಇಟ್ಟು ವಿಕೃತಿ ಮೆರೆದಿದ್ದಾರೆ. ಸ್ಥಳಕ್ಕೆ ಟೀಳಕವಾಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ನಂತರ ಸ್ಥಳದಲ್ಲಿ ತೀವ್ರ ಗಲಾಟೆ, ಗದ್ದಲ ನಡೆದಿದೆ. ಕರ್ನಾಟಕ ಸರ್ಕಾರದ, ಪೊಲೀಸ್ ಇಲಾಖೆಯ ವಾಹನಗಳನ್ನು ಗುರಿಯಾಗಿಟ್ಟುಕೊಂಡು ಪುಂಡರು ಕಲ್ಲು ತೂರಾಟ ನಡೆಸಿದ್ದಾರೆ. ದುರ್ಘಟನೆಯಲ್ಲಿ ಅನೇಕ ಕಾರುಗಳು ಪುಡಿಯಾಗಿವೆ. ಈ ಘಟನೆಯ ನಂತರ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.