ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಮೂವರು ಮಕ್ಕಳು ಗಾಯಗೊಂಡಿದ್ದು, ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯನಗರ (ಜು. 4): ವಿಜಯನಗರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ದಂಪತಿ ದಾರುಣವಾಗಿ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಮೂವರು ಮಕ್ಕಳು ತೀವ್ರ ಗಾಯಗೊಂಡಿರುವ ಮನಕಲಕುವ ಘಟನೆ ನಡೆದಿದೆ. ಈ ಘಟನೆ ಮರಿಯಮ್ಮನಹಳ್ಳಿ ಪಟ್ಟಣದ ಹೊರವಲಯದಲ್ಲಿರುವ ಕೆಪಿಟಿಸಿಎಲ್ ಕಚೇರಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಡೆದಿದೆ.

ಕ್ಯಾಬ್‌ ಚಾಲಕ ಹಾಗೂ ಪತ್ನಿಗೆ ಸ್ಥಳದಲ್ಲೇ ಮರಣ:

ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ಚೆಟ್ನಿಹಾಳು ಗ್ರಾಮದ ಮೂಲದವರಾದ ಮುತ್ತಪ್ಪ ಪೂಜಾರ್ (35) ಹಾಗೂ ಅವರ ಪತ್ನಿ ರೇಣುಕಾ (30) ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಬ್‌ ಚಾಲಕರಾಗಿ ಕೆಲಸ ಮಾಡುತ್ತಿದ್ದ ಮುತ್ತಪ್ಪ, ಮೊಹರಂ ಹಬ್ಬದ ನಿಮಿತ್ತ ಕುಟುಂಬದೊಂದಿಗೆ ತಮ್ಮ ಸ್ವಗ್ರಾಮಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತ ದಂಪತಿಯ ಮಕ್ಕಳಾದ ಅನುಶ್ರೀ (9), ರೂಪಶ್ರೀ (6) ಹಾಗೂ ಖುಷಿ (4) ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳೀಯ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ರವಾನಿಸಲಾಗಿದೆ.

ಅಪಘಾತದ ತೀವ್ರತೆ ಭೀಕರ:

ಬೃಹತ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು, ಅದನ್ನು ಸುಮಾರು ಅರ್ಧ ಕಿಲೋಮೀಟರ್‌ ದೂರದವರೆಗೂ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಡಿಕ್ಕಿಯ ರಭಸದಿಂದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಘಟನಾ ಸ್ಥಳವೇ ದಾರಣ ದೃಶ್ಯಕ್ಕೆ ಸಾಕ್ಷಿಯಾಗಿದೆ. ಘಟನೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶ್ರೀಹರಿಬಾಬು ಬಿ.ಎಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ಮರಿಯಮ್ಮನಹಳ್ಳಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.