Asianet Suvarna News Asianet Suvarna News

ಬೆಂಗಳೂರಲ್ಲಿ ಸ್ವಂತ ಮನೆ ಕಟ್ಟುವವರಿಗೆ 'ನಂಬಿಕೆ ನಕ್ಷೆ' ವಿತರಣೆ; ಬಿಬಿಎಂಪಿಯಿಂದ ಹೊಸ ಆಸ್ತಿ ತೆರಿಗೆ ಪದ್ಧತಿ ಜಾರಿ!

ಬೆಂಗಳೂರಿನಲ್ಲಿ ಸ್ವಂತ ಮನೆ ಕಟ್ಟುವವರಿಗೆ ಬಿಬಿಎಂಪಿಯಿಂದ ನಂಬಿಕೆ ನಕ್ಷೆ ನೀಡಲಾಗುವುದು. ಜೊತೆಗೆ, ಹೊಸ ಆಸ್ತಿ ತೆರಿಗೆ ಪದ್ದತಿಯನ್ನು ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.  

Bengaluru New property tax system  implemented by BBMP and govt will Distribution Nambike Map sat
Author
First Published Mar 11, 2024, 4:13 PM IST

ಬೆಂಗಳೂರು (ಮಾ.11): ಬೆಂಗಳೂರಿನಲ್ಲಿ 50 x 80 ಅಡಿ ವಿಸ್ತೀರ್ಣವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ತಮ್ಮ ಕಟ್ಟಡದ ನಕ್ಷೆಗಳಿಗೆ ಆನ್ ಲೈನ್ ಮೂಲಕ ಸ್ವಯಂ ಅನುಮತಿ ಪಡೆಯುವ 'ನಂಬಿಕೆ ನಕ್ಷೆ' ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಉಪಮುಖ್ಯಮಂತ್ರಿ‌ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಶಿವಕುಮಾರ್ ಅವರು, 'ನಂಬಿಕೆ ನಕ್ಷೆ ಜತೆಗೆ ಬೆಂಗಳೂರಿಗರ ಸಮಸ್ಯೆಗೆ ಪರಿಹಾರ ನೀಡಲು ಹೊಸ ಆಸ್ತಿ ತೆರಿಗೆ ಪದ್ಧತಿ ಹಾಗೂ ಆಸ್ತಿ ತೆರಿಗೆ ಖಾತಾ ವಿತರಣೆಯಂತಹ ಕ್ರಾಂತಿಕಾರಕ ಹೆಜ್ಜೆ ಇಡಲಾಗಿದೆ. 'ಬೆಂಗಳೂರಿನ ನಾಗರಿಕರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ಪಾರದರ್ಶಕ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಮಾಹಿತಿ ನೀಡಿದರು.

ನಂಬಿಕೆಯೊಂದಿಗೆ ಪರಿಶೀಲಿಸುವ ನಕ್ಷೆಯೇ 'ನಂಬಿಕೆ ನಕ್ಷೆ':  ಬ್ರ್ಯಾಂಡ್ ಬೆಂಗಳೂರಿನ ಪರಿಕಲ್ಪನೆಯಡಿ ಈ ಯೋಜನೆ ರೂಪಿಸಲಾಗಿದ್ದು, ಇನ್ನುಮುಂದೆ ಬೆಂಗಳೂರಿನಲ್ಲಿ ಮನೆ ಕಟ್ಟಲು ಮುಂದಾಗಿರುವವರು 50X80 ವಿಸ್ತೀರ್ಣವರೆಗಿನ ನಿವೇಶನ ಹೊಂದಿರುವ, 4 ಯುನಿಟ್ ಮನೆ ಕಟ್ಟಿಕೊಳ್ಳುವವರಿಗೆ ಬಿಲ್ಡಿಂಗ್ ಪ್ಲಾನ್ ಅನ್ನು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ಆನ್ ಲೈನ್ ನಲ್ಲಿ ಕಟ್ಟಡದ ನಕ್ಷೆಗೆ ಸ್ವಯಂ ಅನುಮತಿ ಪಡೆಯಬಹುದು. ಈ ಯೋಜನೆಯಿಂದಾಗಿ ಸಾರ್ವಜನಿಕರು ತಮ್ಮ ಕಟ್ಟಡದ ನಕ್ಷೆಗೆ ಅನುಮತಿ ಪಡೆಯಲು ಪಾಲಿಕೆ ಕಚೇರಿಗಳನ್ನು ಅಲೆಯುವಂತಿಲ್ಲ. ಜತೆಗೆ ಅಧಿಕಾರಿಗಳಿಗೆ ಲಂಚ ನೀಡುವ ಪರಿಸ್ಥಿತಿಯೂ ನಿರ್ಮಾಣವಾಗುವುದಿಲ್ಲ ಎಂದು ತಿಳಿಸಿದರು.

Breaking: ಬೆಂಗಳೂರು ಬಿಜಿಎಸ್ ಮೇಲ್ಸೇತುವೆಯಿಂದ ಕಳಚಿಬಂದ ನಟ್ಟು, ಬೋಲ್ಟ್, ಕಬ್ಬಿಣದ ಪ್ಲೇಟ್

ಅನುಮತಿ ನೀಡುವ ವಾಸ್ತುಶಿಲ್ಪಿಗಳು ಹಾಗೂ ಇಂಜಿನಿಯರ್ ಗಳು ಸರ್ಕಾರದ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡಿರಬೇಕು. ಕಟ್ಟಡದ ನಕ್ಷೆ ನಿಯಮಾನುಸಾರವಾಗಿ ತನ್ನದೇ ಆದ ರೀತಿಯಲ್ಲಿ ತಂತ್ರಜ್ಞಾನದ ಮೂಲಕ ಪರಿಶೀಲನೆ ಮಾಡಲಾಗುವುದು. ಆನ್ ಲೈನ್ ನಲ್ಲೆ ಶುಲ್ಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕಳೆದ ವರ್ಷ 9 ಸಾವಿರ ಕಟ್ಟಡ ನಕ್ಷೆ ಅನುಮತಿ ನೀಡಲಾಗಿದೆ. ಈ ಬಾರಿ 10 ಸಾವಿರ ನಕ್ಷೆ ಅನುಮತಿ ನೀಡಬಹುದು ಎಂದು ಅಂದಾಜು ಮಾಡಲಾಗಿದೆ. ನಾವು ನಾಗರಿಕರನ್ನು ನಂಬಬೇಕು. ಪ್ರಮಾಣಿಕೃತ ಇಂಜಿನಿಯರ್ ಹಾಗೂ ವಾಸ್ತುಶಿಲ್ಪಿ ಗಳನ್ನು ನಂಬಬೇಕು. ಬ್ರ್ಯಾಂಡ್ ಬೆಂಗಳೂರಿಗೆ ಸಂಬಂಧಿಸಿದಂತೆ ನಮಗೆ ಬಂದ 70 ಸಾವಿರಕ್ಕೂ ಹೆಚ್ಚು ಸಲಹೆ ಗಳಲ್ಲಿ ಜನರು ತಮಗಾಗುತ್ತಿರುವ ತೊಂದರೆ ಬಗ್ಗೆ ಮಾಹಿತಿ ನೀಡಿದ್ದರು. ನಾವು ಒಂದೊಂದಾಗಿ ಅವರ ಸಮಸ್ಯೆ ಬಗೆಹರಿಸಿ ಸಲಹೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಈ ಯೋಜನೆಯನ್ನು ಮೊದಲ ಹಂತದಲ್ಲಿ ರಾಜರಾಜೇಶ್ವರಿನಗರ ಹಾಗೂ ದಾಸರಹಳ್ಳಿ ವಲಯದ ಎಲ್ಲಾ ವಾರ್ಡ್ ಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡುತ್ತೇವೆ. ನಂತರ ಬೆಂಗಳೂರಿಗೆ ವಿಸ್ತರಿಸಲಾಗುವುದು ಎಂದರು.

ಹೊಸ ತೆರಿಗೆ ಪದ್ಧತಿ ಜಾರಿ: 2020ರಲ್ಲಿ ಬಿಜೆಪಿ ಸರ್ಕಾರ ತೆರಿಗೆ ಕಾಯ್ದೆ ವಿಚಾರವಾಗಿ ತಿದ್ದುಪಡಿ ಮಾಡಿದರು. ಅದರಲ್ಲಿ ತೆರಿಗೆ ಪಾವತಿ ವಿಚಾರದಲ್ಲಿ ಅನೇಕ ಏರುಪೇರುಗಳಾದವು. 'ಮನೆ ಬಾಗಿಲಿಗೆ ಬಂತು ಸರ್ಕಾರ' ಕಾರ್ಯಕ್ರಮದಲ್ಲಿ ಈ ಬಗ್ಗೆ ಅನೇಕ ದೂರುಗಳು ವ್ಯಕ್ತವಾದವು. ಇದಕ್ಕೆ ಪರಿಹಾರ ನೀಡಲು ಬಜೆಟ್ ಅಧಿವೇಶನದಲ್ಲಿ ತಿದ್ದುಪಡಿ ತಂದು ಎಲ್ಲೆಲ್ಲಿ ದಂಡದ ಸಮಸ್ಯೆ ಇದೆ ಅಲ್ಲೆಲ್ಲಾ ಜು.31ರವರೆಗೂ ತೆರಿಗೆ ಕಟ್ಟಿದವರಿಗೆ ದಂಡ ಹಾಗೂ ಬಡ್ಡಿ ಮನ್ನಾ ಮಾಡುವ ತೀರ್ಮಾನ ಮಾಡಿದ್ದೇವೆ. ಬೆಂಗಳೂರಿನ ನಾಗರಿಕರು ಇದರ ಉಪಯೋಗ ಪಡೆಯಬೇಕು. ದಂಡವನ್ನು ಶೇ. 200 ರಿಂದ ಶೇ.100ಕ್ಕೆ ಇಳಿಸಿದ್ದೇವೆ. ಇನ್ನು ನಾವು 5 ವರ್ಷದವರೆಗೂ ಲೆಕ್ಕಾಚಾರದಲ್ಲಿ ತೆರಿಗೆ ಬಾಕಿಯನ್ನು ವಸೂಲಿ ಮಾಡಲು ತೀರ್ಮಾನಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಪ್ರಸ್ತುತ ಇರುವ ಯುನಿಟ್ ವಿಸ್ತೀರ್ಣ ಮೌಲ್ಯ (UAV) ಆಸ್ತಿ ತೆರಿಗೆ ಪದ್ಧತಿಯನ್ನು 2008ರಲ್ಲಿ ಜಾರಿಗೊಳಿಸಲಾಗಿತ್ತು. ಆಗ ಆಸ್ತಿಗಳನ್ನು 18 ವರ್ಗೀಕರಣ ಮಾಡಲಾಗಿತ್ತು. ಇದರಿಂದ ತೆರಿಗೆ ಪಾವತಿಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಮಾರ್ಗಸೂಚಿ ದರವನ್ನು ಬೆಂಗಳೂರಿನ ವ್ಯಾಪ್ತಿಯಲ್ಲಿ ಏಕರೂಪದ ಆಸ್ತಿ ತೆರಿಗೆ ನಿಗದಿ ಮಾಡಲಾಗಿದೆ. ಈ ವ್ಯವಸ್ಥೆಯಿಂದ ತೆರಿಗೆ ಪದ್ಧತಿಯನ್ನು ಸರಳೀಕರಣ ಮಾಡಲಾಗಿದೆ. ಈಗ ನಾವು 6 ವರ್ಗೀಕರಣಗಳನ್ನು ಮಾಡಿದ್ದು, ವಸತಿ (ಸ್ವಂತ ಬಳಕೆ ಹಾಗೂ ಬಾಡಿಗೆದಾರರ ಬಳಕೆ), ವಾಣಿಜ್ಯ, ಕೈಗಾರಿಕಾ, ಸ್ಟಾರ್ ಹೊಟೇಲ್, ವಿನಾಯಿತಿ ನೀಡಲಾದ ಹಾಗೂ ಸಂಪೂರ್ಣ ಖಾಲಿ ಜಮೀನುಗಳು ಎಂಬ ವರ್ಗೀಕರಣ ಮಾಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕದಲ್ಲೂ ಕಾಟನ್ ಕ್ಯಾಂಡಿ ಬ್ಯಾನ್, ಗೋಬಿ ಮಂಚೂರಿಗೆ ಬಣ್ಣ ನಿಷೇಧ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದೇಶ

ಕಳೆದ ಬಾರಿ ಆಸ್ತಿ ತೆರಿಗೆ ದರಗಳನ್ನು 2016ರಲ್ಲಿ ಪರಿಷ್ಕರಣೆ ಮಾಡಲಾಗಿತ್ತು. ಆಗ ವಸತಿ ಆಸ್ತಿಗಳಿಗೆ ಶೇ.20, ವಸತಿಯೇತರ ಉದ್ದೇಶದ ಆಸ್ತಿಗಳಿಗೆ ಶೇ.25 ಏರಿಕೆಯಾಗಿತ್ತು. ಕಳೆದ 8 ವರ್ಷಗಳಿಂದ ಆಸ್ತಿ ಮೌಲ್ಯ ಏರಿಕೆಯಾಗಿರಲಿಲ್ಲ. ಈಗ ನಾವು ಈ ಬಗ್ಗೆ ಚರ್ಚೆ ಮಾಡಿ ಇದನ್ನು ಕಡಿಮೆ ಮಾಡಲು, ಆಸ್ತಿ ತೆರಿಗೆ ಹೆಚ್ಚಳದ ಮಿತಿಯನ್ನು ಶೇ.10ಕ್ಕೆ ನಿಗದಿ ಪಡಿಸಲಾಗಿದೆ. ಬೆಂಗಳೂರಿನಲ್ಲಿ 18 ಲಕ್ಷ ಆಸ್ತಿ ಮಾಲೀಕರು ತೆರಿಗೆ ವ್ಯಾಪ್ತಿಯಲ್ಲಿ ಒಳಪಡುತ್ತಿಲ್ಲ. ಇವರೆಲ್ಲರೂ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯೊಳಗೆ ಬರಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚಿಸಿದರು. 

ಆಸ್ತಿ ತೆರಿಗೆ ಸಂಖ್ಯೆ ನಿಯೋಜನೆ ಮತ್ತು ಬಿಬಿಎಂಪಿ ಖಾತಾ ವಿತರಣೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾರೆಲ್ಲಾ ಆಸ್ತಿ ತೆರಿಗೆ ಪಾವತಿಗೆ ತಮ್ಮನ್ನು ತಾವು ಘೋಷಣೆ ಮಾಡಿಕೊಂಡಿಲ್ಲವೋ ಅವರಿಗೆ ಒಂದು ಅವಕಾಶ ನೀಡಲಾಗುತ್ತಿದೆ. ಈ ಮೂಲಕ ನಾಗರಿಕರು ತಮ್ಮ ಆಸ್ತಿಯನ್ನು ಸ್ವಯಂ ಘೋಷಣೆ ಮಾಡಿಕೊಂಡು ಆಸ್ತಿ ತೆರಿಗೆ ಸಂಖ್ಯೆ ಮತ್ತು ಬಿಬಿಎಂಪಿ ಖಾತಾ ನೀಡಲಾಗುವುದು. ಬಿಬಿಎಂಪಿಯಿಂದ ದಾಖಲೆ ಸರಿಯಾಗಿ ಇರುವರಿಗೆ ಎ ಖಾತಾ ನೀಡುತ್ತೇವೆ. ಕನ್ವರ್ಷನ್ ಮಾಡಿಕೊಳ್ಳದೇ, ಯೋಜನೆ ಇಲ್ಲದವರಿಗೆ ಬಿ ಖಾತಾ ನೀಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

Follow Us:
Download App:
  • android
  • ios