ನೆಲಮಂಗಲ[ಡಿ.03]: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ಅವರು ನೆಲಮಂಗಲ ತಾಲೂಕು ಕಚೇರಿಯ ಆವರಣವನ್ನು ಸ್ವತಃ ಪೊರಕೆ ಹಿಡಿದು ಸ್ವಚ್ಛಗೊಳಿಸಿದ ಘಟನೆ ಸೋಮವಾರ ನಡೆದಿದೆ.

ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ನೆಲಮಂಗಲ ತಾಲೂಕು ಕಚೇರಿಗೆ ದಿಢೀರ್‌ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಚೇರಿಯ ಆವರಣದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯ, ಕಸ ಬಿದ್ದಿರುವುದನ್ನು ನೋಡಿದ್ದಾರೆ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿಗಳು ಸ್ವತಃ ಪೊರಕೆ ಹಿಡಿದು ಸ್ವಚ್ಛತೆ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳು ಪೊರಕೆ ಹಿಡಿದು ಸ್ವಚ್ಛತೆ ಮಾಡಲು ಮುಂದಾದಾಗ ಕಚೇರಿಯಲ್ಲಿದ್ದ ಸಿಬ್ಬಂದಿ, ಅಧಿಕಾರಿಗಳು ಕಕ್ಕಾಬಿಕ್ಕಿಯಾದರು. ತಕ್ಷಣ ಜಿಲ್ಲಾಧಿಕಾರಿಗಳ ಜೊತೆ ತಾವೂ ಪೊರಕೆ ಹಿಡಿದು ಸ್ವಚ್ಛತೆ ಮಾಡಿದರು. ನಂತರ ಕಚೇರಿಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.