ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಅಂತರ್ಜಲ ಮಟ್ಟ ಕುಸಿತವಾಗಿದೆ. ಜಲಕ್ಷಾಮದ ಭೀತಿಯಿಂದಾಗಿ ಈ 6 ಚಟುವಟಿಕೆಗಳಿಗೆ ಕಾವೇರಿ ನೀರು ಬಳಕೆ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ 5,000 ರೂ. ದಂಡ ವಿಧಿಸಲಾಗುವುದು.
ಬೆಂಗಳೂರು (ಫೆ.17): ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಬಿಸಿಲಿನ ತಾಪಕ್ಕೆ ಅಂತರ್ಜಲ ಮಟ್ಟ ಕುಸಿತವಾಗಿದ್ದು, ಬೋರ್‌ವೆಲ್‌ಗಳು ಬತ್ತಿ ಹೋಗುತ್ತಿವೆ. ಇದರಿಂದ ಬೆಂಗಳೂರಿನ ಜನತೆಗೆ ಜಲಗಂಡಾಂತರ ಕಾದಿರುವ ಮುನ್ಸೂಚನೆ ಲಭ್ಯವಾಗಿದ್ದು, ಕಾವೇರಿ ನೀರಿಗೆ ಭಾರೀ ಬೇಡಿಕೆ ಬರುವ ಸನ್ನಿವೇಶ ಕಂಡುಬರುತ್ತಿದೆ. ಆದ್ದರಿಂದ ಬೆಂಗಳೂರು ನೀರು ಸಬರಾಜು ಒಳ ಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಈ 6 ಕಾರ್ಯಗಳಿಗೆ ಕಾವೇರಿ ಕುಡಿಯುವ ನೀರು ಬಳಕೆ ಮಾಡದಂತೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದಲ್ಲಿ 5,000 ರೂ. ದಂಡ ವಸೂಲಿ ಮಾಡುವುದಾಗಿ ತಿಳಿಸಿದೆ.
ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆಯನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಅಗತ್ಯಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಈ ಕೆಳಕಂಡಂತೆ ಆದೇಶಿಸಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೂ ಮೆಟ್ರೋ ದರ ಏರಿಕೆಗೂ ಸಂಬಂಧವಿಲ್ಲ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ!
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ಈ ಕೆಳಕಂಡ ಉದ್ದೇಶಗಳಿಗೆ ಬಳಸಲು ಈ ಮೂಲಕ ನೀಷೇಧಿಸಲಾಗಿದೆ.
1. ವಾಹನಗಳ ಸ್ವಚ್ಚತೆ
2. ಕೈದೋಟ ನಿರ್ವಹಣೆ
3. ಕಟ್ಟಡ ನಿರ್ಮಾಣ
4. ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆ
5. ಸಿನಿಮಾ ಮಂದಿರ ಮತ್ತು ಶಾಪಿಂಗ್ ಮಾಲ್‌ಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆ
6. ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆ
ಈ ಮೇಲ್ಕಂಡ ನಿಷೇದ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ರೂ. 5000/- ಗಳ ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ ರೂ.5000/- ಜೊತೆಗೆ ಹೆಚ್ಚುವರಿಯಾಗಿ ರೂ.500/-ಪ್ರತಿದಿನದಂತೆ ದಂಡ ಹಾಕಲಾಗುವುದು. ಸಾರ್ವಜನಿಕರು ಮೇಲ್ಕಂಡ ನಿಷೇಧಗಳನ್ನು ಯಾರಾದರು ಉಲ್ಲಂಘನೆ ಮಾಡುವದು ಕಂಡುಬಂದಲ್ಲಿ ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ : 1916 ಗೆ ತಿಳಿಸಬಹುದಾಗಿದೆ.
